ಮಂಗಳೂರು, ಏ. 16 (DaijiworldNews/SM): ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಸೋಂಕು ನಿಯಂತ್ರಣ ಕ್ರಮಗಳನ್ನು ಕಟುನಿಟ್ಟಾಗಿ ಜಾರಿಗೆ ತರುವುದರ ಜೊತೆಗೆ ಕೋವಿಡ್ ಪರೀಕ್ಷೆಗಳನ್ನು ಹೆಚ್ಚು ಹೆಚ್ಚು ಮಾಡಿ, ಸೋಂಕಿತರನ್ನು ಗುರುತಿಸಿ, ಚಿಕಿತ್ಸೆ ನೀಡಿ, ಅವರೊಂದಿಗೆ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕ ಹೊಂದಿದವರಿಗೂ ಸಹ ಪರೀಕ್ಷೆಗೆ ಒಳಪಡಿಸಬೇಕು ಎಂದು ಮುಜರಾಯಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಇಂದು ತಾವು ಚಿಕಿತ್ಸೆ ಪಡೆಯುತ್ತಿದ್ದ ಉಡುಪಿಯ ಆದರ್ಶ ಆಸ್ಪತ್ರೆಯಿಂದ ವೀಡಿಯೋ ಕಾನ್ಫರೆನ್ಸ್ ಮೂಲಕ ಕೊರೋನಾ ನಿಯಂತ್ರಣ ಕ್ರಮಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಮಾತನಾಡಿದರು. ಜಿಲ್ಲೆಯಲ್ಲಿ ದಿನೇ ದಿನೇ ಕೊರೋನಾ ಸೋಂಕಿತರ ಪ್ರಕರಣಗಳು ಹೆಚ್ಚಾಗುತ್ತಿವೆ. ಕಳೆದವಾರ ಪ್ರತೀ ದಿನ 60 ರಿಂದ 70 ಪ್ರಕರಣಗಳು ಬರುತ್ತಿದ್ದರೆ, ನಾಲ್ಕೈದು ದಿನಗಳಿಂದ ಪ್ರತೀ ದಿನ 140ಕ್ಕೂ ಹೆಚ್ಚು ಪ್ರಕರಣಗಳು ಕಂಡು ಬರುವುದರೊಂದಿಗೆ ಜಿಲ್ಲೆಯಲ್ಲಿ ಎರಡನೇ ಅಲೆಯ ಆತಂಕ ಉಂಟುಮಾಡಿದೆ. ಇದರ ನಿಯಂತ್ರಣಕ್ಕೆ ಅಗತ್ಯ ಇರುವ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವುದರೊಂದಿಗೆ ಸೋಂಕಿನ ಪ್ರಮಾಣವನ್ನು ಕಡಿಮೆಗೊಳಿಸಲು ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಾರ್ವಜನಿಕರು ಕೋವಿಡ್ ನಿಯಂತ್ರಣದ ಸರಳ ಮಾರ್ಗಸೂಚಿಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು, ಸ್ಯಾನಿಟೈಸರ್ಗಳ ಬಳಕೆ ಸೇರಿದಂತೆ ಮತ್ತಿತರ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದ ಅವರು ಮಾಲ್ಗಳಲ್ಲಿ, ಪೆಟ್ರೋಲ್ ಬಂಕ್ ಸೇರಿದಂತೆ ಮತ್ತಿತರ ವಾಣಿಜ್ಯ ಚಟುವಟಿಕೆದಾರರು ತಮ್ಮ ಗ್ರಾಹಕರಿಗೆ ಕರೋನಾ ಮಾರ್ಗಸೂಚಿಗಳನ್ನು ಪಾಲಿಸುವಂತೆ ಎಚ್ಚರಿಸಬೇಕು. ರಾತ್ರಿ ಕಫ್ರ್ಯೂ ನಿಯಮಗಳು ಕಟ್ಟುನಿಟ್ಟಾಗಿ ಪಾಲನೆಯಾಗಬೇಕು. ಕೇರಳ ಗಡಿಯಲ್ಲಿ ಕೊರೋನಾ ನೆಗೆಟಿವ್ ರಿಪೋರ್ಟ್ನ ತಪಾಸಣೆ ಸೇರಿದಂತೆ ಮತ್ತಿತರ ನಿಯಂತ್ರಣ ಕ್ರಮಗಳನ್ನು ಜಿಲ್ಲೆಯಾದ್ಯಂತ ಬಿಗಿಗೊಳಿಸಬೇಕು ಎಂದರು.