ಮಂಗಳೂರು, ಮೇ 07 (DaijiworldNews/SM): ಜಿಲ್ಲೆಯಲ್ಲಿ ಹೋಂ ಐಸೋಲೇಟ್ ಆಗಿರುವ ಕೋವಿಡ್ ಸೋಂಕಿತರು ತಮ್ಮ ಮನೆಯಲ್ಲಿ ಪ್ರತ್ಯೇಕವಾಗಿ ಇದ್ದು ಚಿಕಿತ್ಸೆ ಪಡೆಯಲು ಸಾಧ್ಯವಾಗದಿದ್ದರೆ, ಅಂಥವರನ್ನು ತಕ್ಷಣ ಕೋವಿಡ್ ಕೇರ್ ಸೆಂಟರ್ ಗಳಿಗೆ ವರ್ಗಾಯಿಸುವ ಕೆಲಸ ಗ್ರಾಮಮಟ್ಟದ ಟಾಸ್ಕ್ ಪೋರ್ಸ್ ಸಮಿತಿಗಳು ಹಾಗೂ ವಾರ್ಡ್ ಸಮಿತಿಗಳು ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಇಂದು ಉಳ್ಳಾಲದ ನಗರಸಭೆ ಸಭಾಂಗಣದಲ್ಲಿ ಕೋವಿಡ್ ನಿಯಂತ್ರಣ ಕುರಿತು ತೆಗೆದುಕೊಳ್ಳುವ ಕ್ರಮಗಳ ಬಗ್ಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಕೋವಿಡ್ ಸೋಂಕಿತರು ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರೆ ಅವರು ಪ್ರತ್ಯೇಕ ಕೋಣೆಯಲ್ಲಿ ಇರುವ ಬಗ್ಗೆ ಖಾತರಿಪಡಿಸಿಕೊಳ್ಳಬೇಕು. ಕೋವಿಡ್ ಸೋಂಕಿತರನ್ನು ಪ್ರತ್ಯೇಕವಾಗಿರಲು ಸಾಧ್ಯವಾಗದ ಸ್ಥಿತಿ ಇದ್ದರೆ ಅಂಥಹಾ ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್ಗೆ ದಾಖಲು ಮಾಡಿ. ಸೋಂಕಿತರು ಮುನ್ನೆಚ್ಚರಿಕೆ ತೆಗೆದುಕೊಳ್ಳದೇ ಇರುವುದರಿಂದ ಮನೆಗಳಲ್ಲಿರುವ ಇತರೆ ಬಹಳಷ್ಟು ಜನರಿಗೆ ಸೋಂಕು ಹರಡಿಸುವುದರ ಜೊತೆಗೆ ನೆರೆಹೊರೆಯವರಿಗೂ ರೋಗ ಹರಡುವ ಸಾಧ್ಯತೆ ಇರುತ್ತದೆ ಈ ಬಗ್ಗೆ ಎಚ್ಚರವಹಿಸಬೇಕು ಎಂದರು.
ಗ್ರಾಮ ಪಂಚಾಯಿತಿ ಮಟ್ಟದ ಟಾಸ್ಕ್ ಪೋರ್ಸ್ ಸಮಿತಿಗಳು ಹಾಗೂ ವಾರ್ಡ್ ಸಮಿತಿಗಳು ಪ್ರತಿದಿನ ಬೆಳಗ್ಗೆ 9 ಗಂಟೆಗೆ ಸಭೆ ನಡೆಸಬೇಕು. ಗ್ರಾಮ ಪಂಚಾಯಿತಿ ಅಥವಾ ವಾರ್ಡ್ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸೋಂಕು ದೃಢಪಟ್ಟಿರುವ ಬಗ್ಗೆ ಬಂದಿರುವ ವರದಿಯನ್ನು ಪಡೆದು ಏನೆಲ್ಲ ಕ್ರಮಗಳು ತೆಗೆದುಕೊಳ್ಳಬೇಕೆಂಬ ಬಗ್ಗೆ ಚರ್ಚಿಸಿ ಕ್ರಮವಹಿಸಬೇಕು ಎಂದರು.
ಕೋವಿಡ್ ನಿಯಂತ್ರಣಕ್ಕೆ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಚಾಚೂ ತಪ್ಪದೇ ಜಾರಿಗೆ ತರುವ ಕೆಲಸವನ್ನು ಅಧಿಕಾರಿಗಳು ಜವಾಬ್ದಾರಿಯುತವಾಗಿ ಮಾಡುವುದರೊಂದಿಗೆ ಕೋವಿಡ್ ನಿಯಂತ್ರಣಕ್ಕೆ ಮುಂದಾಗಬೇಕು ಎಂದರು.
ಕೋವಿಡ್ ಸೋಂಕಿನಿಂದ ಮರಣ ಹೊಂದಿದವರ ಅಂತ್ಯಸಂಸ್ಕಾರ ಕೈಗೊಳ್ಳಲು ಅಗತ್ಯವಿರುವ ಜಾಗವನ್ನು ಗುರುತಿಸಿ ಇಡಬೇಕು ಎಂದ ಅವರು ಸರ್ಕಾರವೇ ಅಂತ್ಯಕ್ರಿಯೆಯ ವೆಚ್ಚವನ್ನು ಭರಿಸಲಿದೆ ಎಂದರು.