ಉಡುಪಿ, ಮೇ 12 (DaijiworldNews/MB) : ಉಡುಪಿ ಜಿಲ್ಲೆಯಲ್ಲಿ ಕೊರೊನಾ ಸಂಬಂಧ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗುವ ಸೋಂಕಿತರಿಗೆ ಆಸ್ಪತ್ರೆಯಲ್ಲಿ ಬೆಡ್ ವ್ಯವಸ್ಥೆ ಹಾಗೂ ತೀರ ಅಗತ್ಯವಿದ್ದಲ್ಲಿ ಆಕ್ಸಿಜನ್ ಬೆಡ್, ಐಸಿಯು, ವೆಂಟಿಲೇಟರ್ ಸೇರಿದಂತೆ ಎಲ್ಲಾ ವ್ಯವಸ್ಥೆಗಳನ್ನು ಮಾಡುವ ಸಲುವಾಗಿ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಅವರ ಕಾರ್ಯಭಾರ ಹಾಗೂ ಜವಾಬ್ದಾರಿ ಬಗ್ಗೆ ಮೇ 12 ರಂದು ಜಿಲ್ಲಾ ಪಂಚಾಯತ್ ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಯವ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತು.
ಸಭೆಯಲ್ಲಿ ಭಾಗವಹಿಸಿದ ಶಾಸಕ ಶ್ರೀ ಕೆ ರಘುಪತಿ ಭಟ್ ಅವರು ಕೋವಿಡ್ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಸಮಸ್ಯೆ ಆಗದ ರೀತಿಯಲ್ಲಿ ತಮ್ಮ ಜವಾಬ್ದಾರಿಯನ್ನು ಅರಿತು ಕಾರ್ಯನಿರ್ವಹಿಸುವ ಬಗ್ಗೆ ಸೂಚಿಸಿದರು.
ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಸಹಾಯಕ ಆಯುಕ್ತ ರಾಜು, ಜಿಲ್ಲಾ ಪಂಚಾಯತ್ ಯೋಜನಾಧಿಕಾರಿ ಶ್ರೀನಿವಾಸ ರಾವ್ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ನೇಮಕಗೊಂಡ ನೋಡಲ್ ಅಧಿಕಾರಿಗಳು ಉಪಸ್ಥಿತರಿದ್ದರು.