ಹುಬ್ಬಳ್ಳಿ, ಅ06(SS): ದನದ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ, 14 ಜಾನುವಾರುಗಳು ಸಜೀವ ದಹನವಾಗಿರುವ ಘಟನೆ ನಡೆದಿದೆ.
ಧಾರವಾಡದ ಕಲಘಟಗಿ ತಾಲೂಕಿನ ಗಳಗಿ ಹುಲಕೊಪ್ಪ ಗ್ರಾಮದಲ್ಲಿ ಘಟನೆ ನಡೆದಿದ್ದು, ಗಳಗಿ ಹುಲಕೊಪ್ಪ ಗ್ರಾಮದ ಅಡಿವೆಯ್ಯ ಹಿರೇಮಠ ಎಂಬವರಿಗೆ ಈ ಜಾನುವಾರುಗಳು ಸೇರಿದ್ದವು. ಜೀವನಾಧಾರವಾಗಿದ್ದ ಜಾನುವಾರುಗಳನ್ನು ಕಳೆದುಕೊಂಡು ರೈತ ಕಂಗಾಲಾಗಿದ್ದಾನೆ.
ಬೆಂಕಿಯ ಕೆನ್ನಾಲಿಗೆಗೆ ಕೊಟ್ಟಿಗೆ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ವಿಷಯ ತಿಳಿಯುತ್ತಿದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಘಟನೆ ನಡೆದ ನಂತರ ಸ್ಥಳಕ್ಕೆ ತೆರಳಿದ ಕಲಘಟಗಿ ಪೋಲಿಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.