ಉಡುಪಿ, ಅ 07(SM): ಭಾರತ ಚುನಾವಣಾ ಆಯೋಗ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಅಕ್ಟೋಬರ್ 6 ರಂದು ಉಪ ಚುನಾವಣೆ ಘೋಷಣೆ ಮಾಡಿದೆ. ಅದರಂತೆ ಶಿವಮೊಗ್ಗ ಲೋಕಸಭಾ ವ್ಯಾಪ್ತಿಗೆ ಒಳಪಡುವ ಉಡುಪಿ ಜಿಲ್ಲೆಯ ಬೈಂದೂರು ವಿಧಾನ ಸಭಾ ಕ್ಷೇತ್ರದಲ್ಲಿ ನವೆಂಬರ್ ೦3 ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಮಾದರಿ ಚುನಾವಣಾ ನೀತಿ ಸಂಹಿತೆ ತಕ್ಷಣದಿಂದ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ತಿಳಿಸಿದ್ದಾರೆ.
ರವಿವಾರ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನವೆಂಬರ್ 6 ಕ್ಕೆ ಮತ ಎಣಿಕೆ ನಡೆಯಲಿದೆ. ಬೈಂದೂರಿನಲ್ಲಿ 2,21,972 ಮತದಾರರಿದ್ದಾರೆ. 243 ಮತಗಟ್ಟೆಗಳನ್ನು ಮತ್ತು 3 ಹೆಚ್ಚುವರಿ ಮತಗಟ್ಟೆಗಳನ್ನು ತೆರೆಯಲಾಗಿದ್ದು, ಚುನಾವಣೆಯಲ್ಲಿ ಇವಿಎಂ ಮತ್ತು ವಿವಿಪ್ಯಾಟ್ ಯಂತ್ರಗಳನ್ನು ಬಳಸಲಾಗುವುದು ಎಂದು ಹೇಳಿದರು.
ಸಹಾಯಕ ಚುನಾವಣಾಧಿಕಾರಿಯಾಗಿ ಜಿಲ್ಲಾಧಿಕರಿಗಳ ಭೂ ಮಾಪನಾ ತಾಂತ್ರಿಕ ಸಹಾಯಕರು ಹಾಗೂ ಭೂ ದಾಖಲೆಗಳ ಉಪ ನಿರ್ದೇಶಕರನ್ನು ನೇಮಕ ಮಾಡಲಾಗಿದೆ. ಚುನಾವಣೆ ಕರ್ತವ್ಯಕ್ಕೆ 246 ಮತಗಟ್ಟೆ ಅಧಿಕಾರಿಗಳು, 246 ಸಹಾಯಕ ಮತಗಟ್ಟೆ ಅಧಿಕಾರಿಗಳು ಹಾಗೂ 123 ಮೀಸಲು ಸಿಬ್ಬಂದಿ ಅಗತ್ಯವಿದೆ ಎಂದು ಡಿಸಿ ಹೇಳಿದರು. ಇನ್ನು ಶಾಂತಿಯುತ ಮತದಾನಕ್ಕೆ ಎಲ್ಲಾ ರೀತಿಯ ಕ್ರಮಕೈಗೊಳ್ಳಲು ಪೊಲೀಸ್ ಇಲಾಖೆಗೆ ತಿಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.