ಮಂಗಳೂರು, ಅ 8 (MSP): ಅರಬ್ಬೀ ಸಮುದ್ರದಲ್ಲಿ ಸೃಷ್ಟಿಯಾಗಿರುವ ವಾಯುಭಾರ ಕುಸಿತವೂ ಓಮಾನ್ ದೇಶದತ್ತ ಸಾಗುತ್ತಿದ್ದು ಸಧ್ಯ ಇದರ ಚಲನೆಯ ದಿಕ್ಕು ಬದಲಾಗಿರುವ ಕಾರಣ ದಕ್ಷಿಣ ಕನ್ನಡ ಸಹಿತ ಕರಾವಳಿ ಕರ್ನಾಟಕ ಭಾಗಕ್ಕೆ ಪರಿಣಾಮ ಬೀರುವ ಸಾಧ್ಯತೆ ತೀರಾ ಕಡಿಮೆಯಾಗಿದೆ.
ಆದರೆ ಬಂಗಾಳಕೊಲ್ಲಿಯಲ್ಲಿ ಅ.7 ರಿಂದ 11 ರೊಳಗೆ ವಾಯಭಾರ ಕುಸಿತ ಉಂಟಾಗುವ ಸಾಧ್ಯತೆಗಳಿವೆ. ಇದು ಒರಿಸ್ಸಾ ಕರಾವಳಿ ಕಡೆಗೆ ಚಲಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿಂದೆ ಅರಬ್ಬೀ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತದಿಂದ ಸಂಜೆಯಾಗುತ್ತಿದ್ದಂತೆ ಕರಾವಳಿಯಲ್ಲಿ ದಟ್ಟ ಕಾರ್ಮೋಡ ಆವರಿಸಿ ಮಳೆಯಾಗುತ್ತಿತ್ತು. ಒಂದು ವೇಳೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನಲೆಯಲ್ಲಿ ಅಲೆಗಳ ಅಬ್ಬರ ಹೆಚ್ಚಿದರೆ ಚಂಡಮಾರುತವಾಗಿ ಬದಲಾಗುವ ಸಾಧ್ಯತೆ ಇದೆ. ಈ ಹಿನ್ನಲೆಯಲ್ಲಿ ಅ.10 ರವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಮುಂದಿನ ಎರಡು ದಿನಗಳಲ್ಲಿ ಕರಾವಳಿ ಪ್ರದೇಶದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.