ಮಂಗಳೂರು, ಜೂ. 22 (DaijiworldNews/SM): ಚಂಡಮಾರುತ ಹಾಗೂ ಮಳೆಯ ಪ್ರಭಾವದಿಂದ ತೀವ್ರ ಸಮುದ್ರ ಕೊರೆತ ತಡೆಗೋಡೆ ಕಾಮಗಾರಿಗಳನ್ನು ವೈಜ್ಞಾನಿಕವಾಗಿ ಆಧ್ಯತೆಯ ಮೇಲೆ ಕೈಗೊಂಡು ಶೀಘ್ರದಲ್ಲಿಯೇ ಪೂರ್ಣಗೊಳಿಸಬೇಕು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ತಿಳಿಸಿದರು.
ಅವರು ಜಿಲ್ಲಾ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಕರಾವಳಿ ಪ್ರದೇಶದಲ್ಲಿ ಸಮುದ್ರ ಕೊರೆತ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಗೆ ನೀಡಿರುವ ಅನುದಾನ ಹಾಗೂ ಬಂದರುಗಳ ಅಭಿವೃದ್ಧಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರಸ್ತುತ ಸಾಲಿನ ಸಮುದ್ರ ಕೊರೆತ ಕಾಮಗಾರಿಗಳನ್ನು ಕೈಗೊಳ್ಳಲು ಕರಾವಳಿಯ ಮೂರು ಜಿಲ್ಲೆಗಳಿಗೆ 35 ಕೋಟಿ ಅನುದಾನ ಒದಗಿಸಲಾಗಿದೆ. ಮುಂದುವರೆದ ಕಾಮಗಾರಿಗಳಿಗೆ ಅವಶ್ಯವಿರುವ 70 ಕೋಟಿ ರೂಪಾಯಿಯ ಹೆಚ್ಚುವರಿ ಅನುದಾನದ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಗೆ ಕಳುಹಿಸಿರುವುದನ್ನು ಮುಖ್ಯಮಂತ್ರಿಗಳು ಒಪ್ಪಿಗೆ ಸೂಚಿಸಿರುತ್ತಾರೆ ಎಂದರು.
ಕಡಲ ಕೊರೆತಕ್ಕೆ ಸಂಬಂಧಿಸಿದಂತೆ ಕಳೆದ 3 ವರ್ಷಗಳಿಂದ ಬಾಕಿಯಿರುವ ಕಾಮಗಾರಿಗಳನ್ನು ಪ್ರಸ್ತುತ ಸಾಲಿನ ಬಂದರು ಇಲಾಖೆಯ ಕ್ರಿಯಾ ಯೋಜನೆಗೆ ಸೇರಿಸಿ ಅದಕ್ಕೆ ಅಗತ್ಯವಿರುವ ಅನುದಾನವನ್ನು ಒದಗಿಸಲು ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿ ಎಂದು ಸೂಚನೆ ನೀಡಿದರು.
ಕೇಂದ್ರ ಸರ್ಕಾರದ ಸಾಗರಮಾಲಾ ಯೋಜನೆಯಡಿ ಮಂಗಳೂರಿನ ಹಳೆ ಬಂದರಿನ ಕ್ಯಾಪಿಟಲ್ ಡ್ರೆಜ್ಜಿಂಗ್ ಕಾಮಗಾರಿ ಹಾಗೂ ಕೋಸ್ಟಲ್ ಬರ್ತ್ ನಿರ್ಮಾಣ ಕಾಮಗಾರಿಗಳನ್ನು ಕ್ರಮವಾಗಿ 29 ಕೋಟಿ ಹಾಗೂ 65 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿದೆ ಎಂದರು.