ಮಂಗಳೂರು, ಜು. 23 (DaijiworldNews/SM): ಕೋವಿಡ್-19 ಸೋಂಕಿನ ಮೊದಲ ಹಾಗೂ ಎರಡನೇ ಅಲೆಯನ್ನು ನಿಯಂತ್ರಿಸುವಲ್ಲಿ ಜಿಲ್ಲಾಡಳಿತದೊಂದಿಗೆ ವೈದ್ಯಕೀಯ ಕಾಲೇಜುಗಳು, ಖಾಸಗಿ ಆಸ್ಪತ್ರೆಗಳು ಹಾಗೂ ಆರೋಗ್ಯ ಇಲಾಖೆಯ ಎಲ್ಲಾ ತಂಡಗಳು ಅತ್ಯುತ್ತಮವಾಗಿ ಸಹಕಾರ ನೀಡಿವೆ. ಸಂಭಾವ್ಯ ಮೂರನೇ ಅಲೆ ಎದುರಾದಲ್ಲೀ ಅದನ್ನು ತಡೆಗಟ್ಟಲು ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಈಗಿನಿಂದಲೇ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸೂಚಿಸಿದ್ದಾರೆ.
ಅವರು ಜು.23ರ ಶುಕ್ರವಾರ ನಗರದ ವೆನ್ಲಾಕ್ ಮಕ್ಕಳ ಆಸ್ಪತ್ರೆಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಭಾರತೀಯ ಶಿಶು ವೈದ್ಯರ ಜಿಲ್ಲಾ ಸಂಘದ ಸಂಯುಕ್ತ ಆಶ್ರಯದಲ್ಲಿ ಜು.23ರಂದು ಕೋವಿಡ್-19ನ 3ನೇ ಅಲೆ ತಡೆಗಟ್ಟುವಿಕೆ ಹಾಗೂ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ಕುರಿತು ಹಮ್ಮಿಕೊಳ್ಳಲಾಗಿದ್ದ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು.
ಕೋವಿಡ್-19 ಕರ್ತವ್ಯ ನಿರ್ವಹಿಸುವ ಎಲ್ಲಾ ವೈದ್ಯರು ಹಾಗೂ ಸಿಬ್ಬಂದಿಯವರಿಗೆ ತರಬೇತಿ ನೀಡುವ ಮೂಲಕ, ಅವರಲ್ಲಿ ಮತ್ತಷ್ಟು ಆತ್ಮಸ್ಥೆರ್ಯ ಹೆಚ್ಚಿಸಬೇಕು, ಜಿಲ್ಲಾಡಳಿತದೊಂದಿಗೆ ಇತರೆ ಇಲಾಖೆಗಳ ಸಮನ್ವಯತೆ, ಖಾಸಗಿ ವೈದ್ಯಕೀಯ ಕಾಲೇಜುಗಳು, ಖಾಸಗಿ ಆಸ್ಪತ್ರೆಗಳು, ಸಂಭಾವ್ಯ ಮೂರನೇ ಅಲೆಯಲ್ಲಿ ಮಕ್ಕಳಿಗೆ ಬರುವ ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಾರ್ಯಪ್ರವೃತರಾಗಿ ಎಲ್ಲಾ ರೀತಿಯ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ತಿಳಿಸಿದರು.
ಸಮುದಾಯದ ಸಹಭಾಗಿತ್ವದೊಂದಿಗೆ ಜನರಿಗೆ ಹೆಚ್ಚಿನ ಅರಿವು ಮೂಡಿಸಲು ಕ್ರಮಕೈಗೊಳ್ಳಬೇಕು, ಆರೋಗ್ಯ, ಆಶಾ ಕಾರ್ಯಕರ್ತೆಯರ ಮೂಲಕ ಸಾರ್ವಜನಿಕ ವಲಯದಲ್ಲಿ ಜಾಗೃತಿ ಮೂಡಿಸಬೇಕು, ಅವರ ಕ್ಷೇತ್ರ ಭೇಟಿಯ ಸಂದರ್ಭದಲ್ಲಿ 18 ವರ್ಷದೊಳಗಿನ ಎಲ್ಲಾ ಮಕ್ಕಳ ಸಾಮಾನ್ಯ ಆರೋಗ್ಯ ಸ್ಥಿತಿಯ ವಿವರಗಳನ್ನು ಪಡೆದು ವಿಶೇಷವಾಗಿ ಮಕ್ಕಳಲ್ಲಿ ಕಂಡುಬರುವ ತೀವ್ರತರದ ತೊಂದರೆಗಳನ್ನು ಆರಂಭಿಕ ಹಂತದಲ್ಲಿ ಪತ್ತೆಹಚ್ಚಿ ಚಿಕಿತ್ಸೆ ನೀಡಬೇಕು, ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದಲ್ಲಿ ಮೇಲ್ದರ್ಜೆಯ ಆಸತ್ರೆಗೆ ಅವರನ್ನು ಕಳುಹಿಸಲು ವೈದ್ಯಾಧಿಕಾರಿಗಳ ಮೂಲಕ ಶಿಫಾರಸ್ಸು ಮಾಡುವುದು ಅತೀ ಅಗತ್ಯ ಎಂದು ಹೇಳಿದರು.