ಬಾಗಲಕೋಟೆ, ಅ 18(SM): ರಾಜ್ಯದಲ್ಲಿ ೫ ವರ್ಷಗಳ ಕಾಲ ಆಳ್ವಿಕೆ ನಡೆಸಿದ್ದ ಮಾಜಿ ಮುಖ್ಯಮಂತ್ರಿ ಮತ್ತು ಬಾದಾಮಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಸಿದ್ದರಾಮಯ್ಯ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ ಎನ್ನಲಾಗಿದೆ. ಮುಂದಿನ ದಿನಗಳಲ್ಲಿ ಚುನಾವಣೆಗಳಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದಾಗಿ ತಿಳಿದು ಬಂದಿದೆ.
ಬುಧವಾರ ಬಾಗಲಕೋಟೆ ಜಿಲ್ಲೆಯ ಬಾದಾಮಿ ವಿಧಾನಸಭೆ ಕ್ಷೇತ್ರದ ಗುಳೇದಗುಡ್ಡ ಪಟ್ಟಣದಲ್ಲಿ ಪುರಸಭೆಗೆ ನೂತನವಾಗಿ ಆಯ್ಕೆಯಾಗಿರುವ ಸದಸ್ಯರನ್ನು ಅಭಿನಂದನಾ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಪಾಲ್ಗೊಂಡು ಮಾತನಾಡಿದರು.
'ನಾನು 13 ವರ್ಷ ಚುನಾವಣೆ ಎದುರಿಸಿದ್ದೇನೆ. ಈ ಐದು ವರ್ಷದ ಅವಧಿ ಪೂರೈಸಿದ ಮೇಲೆ ಮುಂದೆ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಆದರೆ, ರಾಜಕಾರಣ ಬಿಡುವುದಿಲ್ಲ'. ರಾಜಕೀಯದಲ್ಲಿ ಸಕ್ರೀಯನಾಗಿರುತ್ತೇನೆ ಎಂದು ಮಾಝಿ ಸಿಎಂ ಘೋಷಣೆ ಮಾಡಿದ್ದಾರೆ. 2018ರ ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದರು. ಅಂತಿಮವಾಗಿ ಚುನಾವಣೆ ಸಂದರ್ಭದಲ್ಲಿ ಹೈಕಮಾಂಡ್ ನಾಯಕರ ಒತ್ತಾಯಕ್ಕೆ ಮಣಿದು ಮೈಸೂರಿನ ಚಾಮುಂಡೇಶ್ವರಿ, ಬಾದಾಮಿ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು. ಬಾದಾಮಿಯಲ್ಲಿ ಗೆದ್ದಿದ್ದರು.
ನನಗೆ 71 ವರ್ಷ ವಯಸ್ಸಾಗಿದೆ. ಹಾಗಾಗಿ ಈಗಿನ 5 ವರ್ಷ ಪೂರೈಸಿದ ಮೇಲೆ ಇನ್ನು ಮುಂದೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದಿದ್ದಾರೆ. ಅಭಿವೃದ್ಧಿ ಕೆಲಸ ಮಾಡಲು ಚುನಾವಣೆಗೆ ನಿಲ್ಲಬೇಕೆಂದಿಲ್ಲ. ಆದರೆ, ರಾಜಕೀಯದಿಂದ ನಾನು ದೂರವಾಗುವುದಿಲ್ಲ' ಎಂದು ಸಿದ್ದರಾಮಯ್ಯ ಹೇಳಿದರು.
2013ರ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಸ್ಪರ್ಧಿಸಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದರು. ಆದರೆ, 2018ರ ಚುನಾವಣೆಯಲ್ಲಿ ಕ್ಷೇತ್ರವನ್ನು ಪುತ್ರ ಡಾ.ಯತೀಂದ್ರ ಅವರಿಗೆ ಬಿಟ್ಟುಕೊಟ್ಟಿದ್ದರು. ತಾವು ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ತಿಳಿಸಿದ್ದರು. ಆದರೆ, ಹೈಕಮಾಂಡ್ ನಾಯಕರು ಅವರ ಮೇಲೆ ಒತ್ತಡ ಹಾಕಿದ್ದರು. ಹೈಕಮಾಂಡ್ ಒತ್ತಡದ ಹಿನ್ನಲೆಯಲ್ಲಿ ಸಿದ್ದರಾಮಯ್ಯ ಅವರು ಮೈಸೂರಿನ ಚಾಮುಂಡೇಶ್ವರಿ ಮತ್ತು ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರದಿಂದ ಕಣಕ್ಕಿಳಿದಿದ್ದರು. ಆದರೆ, ಚಾಮುಂಡೇಶ್ವರಿ ಕ್ಷೇತ್ರದಲ್ಲಿ 85,283 ಮತಗಳನ್ನು ಪಡೆದು ಸೋಲು ಅನುಭವಿಸಿದ್ದರು. ಬಾದಾಮಿ ಕ್ಷೇತ್ರದಲ್ಲಿ 67,599 ಮತಗಳನ್ನು ಪಡೆದು ಜಯಗಳಿಸಿದ್ದರು.
ಸಿದ್ದರಾಮಯ್ಯನವರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಚುನಾವಣೆಯಲ್ಲಿ ಸೋತರೂ ಅವರ ಪ್ರಭಾವ ಕುಗ್ಗಿಲ್ಲ. ಮೈಸೂರಿನ ನಿವಾಸಕ್ಕೆ ಹೋದರೆ ನೂರಾರು ಜನರು ಸಮಸ್ಯೆ ಹೊತ್ತು ಆಗಮಿಸುತ್ತಾರೆ. ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವಿದ್ದು, ಅವರು ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ಅಧ್ಯಕ್ಷರೂ ಕೂಡ ಮಾಜಿ ಸಿಎಂ ಸಿದ್ದರಾಮಯ್ಯನವರೇ ಆಗಿದ್ದಾರೆ.