ಮಂಡ್ಯ, ಅ 24(SM): ಕೋಮುವಾದಿ ಬಿಜೆಪಿ ಪಕ್ಷವನ್ನು ಅಧಿಕಾರದಿಂದ ದೂರವಿಟ್ಟು, ರಾಜ್ಯದ ಜನತೆಗೆ ಉತ್ತಮ ಆಡಳಿತ ನೀಡಲು ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದೆ. ಈ ಹಿಂದೆ ನಮ್ಮ ನಡುವೆ ಏನೇ ಆಗಿದ್ದರೂ ಅವುಗಳನ್ನು ಮರೆತು ಒಗ್ಗಟ್ಟಿನಿಂದ ಚುನಾವಣೆ ಎದುರಿಸಲಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮಂಡ್ಯದಲ್ಲಿ ನಡೆದ ಸಂಧಾನ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಂಗ್ರೆಸ್-ಜೆಡಿಎಸ್ ಮೈತ್ರಿಯನ್ನು ಅಪವಿತ್ರ ಮೈತ್ರಿ ಎಂದು ಟೀಕಿಸಲು ಬಿಜೆಪಿಗೆ ನೈತಿಕತೆಯಿಲ್ಲ. ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿ ಪಿಡಿಪಿ ಪಕ್ಷದ ಜತೆ ಮೈತ್ರಿ ಮಾಡಿಕೊಂಡಿತ್ತು. ಆದರೆ, ಅದೇ ಪಕ್ಷವನ್ನು ಮೈತ್ರಿಗೂಮುನ್ನ ಉಗ್ರರ ನಂಟು ಹೊಂದಿರುವ ಪಕ್ಷವೆಂದು ಬಿಜೆಪಿ ಆರೋಪಿಸಿತ್ತು. ಬಿಹಾರದಲ್ಲಿಯೂ ಜೆಡಿಯು ಜತೆಗೆ ಇಂತಹ ಅಪವಿತ್ರ ಮೈತ್ರಿ ಮಾಡಿಕೊಂಡಿದೆ. ಈಗ ನಮ್ಮ ಮೈತ್ರಿಯನ್ನು ಟೀಕಿಸುತ್ತಿದ್ದಾರೆ. ಆದರೆ, ಬಿಜೆಪಿ ಪಕ್ಷಕ್ಕೆ ನಮ್ಮ ಪಕ್ಷವನ್ನು ಟೀಕಿಸುವ ನೈತಿಕತೆ ಇಲ್ಲ. ಕೋಮುವಾದಿ ಪಕ್ಷವನ್ನು ದೂರ ಇರಿಸುವ ಸಲುವಾಗಿ ಈ ಮೈತ್ರಿ ಮಾಡಿಕೊಂಡಿದ್ದೇವೆ ಎಂದು ಅವರು ಹೇಳಿದರು.
ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥಿಯ ಪರ ಪ್ರಚಾರದಲ್ಲಿ ಭಾಗವಹಿಸಲು ಸ್ಥಳೀಯ ಕಾಂಗ್ರೆಸ್ ಮುಖಂಡರು ಹಿಂದೇಟು ಹಾಕುತ್ತಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಎರಡೂ ಪಕ್ಷದ ಮುಖಂಡರ ಜತೆಗೆ ಸಿದ್ದರಾಮಯ್ಯ ಮಾತುಕತೆ ನಡೆಸಿದ್ದಾರೆ. ಮಂಡ್ಯ ಕಾಂಗ್ರೆಸ್ನಲ್ಲಿ ಯಾವುದೇ ಭಿನ್ನಮತವಿಲ್ಲ. ಸಂಧಾನ ಸಭೆಗೆ ಎಲ್ಲ ನಾಯಕರು ಹಾಜರಾಗಿದ್ದಾರೆ. ರಾಜ್ಯದಲ್ಲಿ ನಡೆಯಲಿರುವ ಉಪ ಚುನಾವಣೆಯಲ್ಲಿ ಎಲ್ಲಾ ಐದು ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದರು.