ಮಂಗಳೂರು, (DaijiworldNews/MS): ಕೇರಳ ಹಾಗೂ ಮಹಾರಾಷ್ಟ್ರ ರಾಜ್ಯದಲ್ಲಿ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಗಡಿಜಿಲ್ಲೆಗಳಲ್ಲಿ ಪಾಸಿಟಿವ್ ಪ್ರಮಾಣ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಾಂತ್ಯ ಕರ್ಪ್ಯೂವನ್ನು ಆ.07 ರಿಂದ ಅನ್ವಯಿಸಿ ಆಗಸ್ಟ್ 16ರ ವರೆಗೆ ರಾಜ್ಯ ಸರ್ಕಾರ ಜಾರಿಗೊಳಿಸಿದೆ.
ಈ ಹಿನ್ನಲೆಯಲ್ಲಿ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಅವರು ಆ.06 ರ ಶುಕ್ರವಾರ ರಾತ್ರಿ ವಾಹನ ತಪಾಸಣೆ ನಡೆಸಿ ರಾತ್ರಿ ಕರ್ಪ್ಯೂ ಜಾರಿಯಾಗಿರುವುದರಿಂದ ಒಡಾಟ ನಡೆಸದಂತೆ ಎಚ್ಚರಿಕೆ ನೀಡಿದರು.
ವಾರಾಂತ್ಯ ಕರ್ಪ್ಯೂವಿನಲ್ಲಿ ಶುಕ್ರವಾರ ರಾತ್ರಿ 9 ರಿಂದ ಸೋಮವಾರ ಬೆಳಗ್ಗೆ ಐದರವರೆಗೆ ಜಿಲ್ಲೆಯಲ್ಲಿ ತುರ್ತು ಹಾಗೂ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದೆಲ್ಲ ಕಾರ್ಯಚಟುವಟಿಕೆ ಹಾಗೂ ಜನರ ಓಡಾಟಕ್ಕೆ ನಿರ್ಬಂಧ ಹಾಕಲಾಗಿದೆ.
ಅಗತ್ಯ ವಸ್ತುಗಳ ಮಾರಾಟಕ್ಕೆ ಮಾತ್ರ ಅವಕಾಶವಿದ್ದು, ತರಕಾರಿ, ಹೂವು ಹಣ್ಣು, ಹಾಲು, ಮದ್ಯದಂಗಡಿ, ದಿನಸಿ ಅಂಗಡಿ ತೆರೆಯಬಹುದಾಗಿದೆ. ಬೆಳಗ್ಗೆ 5 ಗಂಟೆಯಿಂದ ಮಧ್ಯಾಹ್ನ 2ಗಂಟೆ ವರೆಗೆ ಮಾತ್ರ ಅಗತ್ಯ ಸಾಮಾಗ್ರಿಗಳ ಖರೀದಿಗೆ ಅವಕಾಶ ನೀಡಿದ್ದು, ಉಳಿದಂತೆ ಎಲ್ಲಾ ಅಂಗಡಿ ಮುಂಗಟ್ಟುಗಳು ಬಂದ್ ಆಗಿರಲಿವೆ. ಹೋಟೆಲ್ಗಳಲ್ಲಿ ಪಾರ್ಸಲ್ಗಳಿಗೆ ಮಾತ್ರ ಅವಕಾಶ ಕೊಡಲಾಗಿದೆ.