ಉಡುಪಿ, ಆ 07 (DaijiworldNews/PY): ಉಡುಪಿ ಜಿಲ್ಲಾ ಭಾರತೀಯ ಜನತಾ ಪಾರ್ಟಿ ಇದರ ವತಿಯಿಂದ ರಾಜ್ಯದ ಸಚಿವ ಸಂಪುಟದಲ್ಲಿ ನೂತನ ಸಚಿವರಾಗಿ ಆಯ್ಕೆಯಾಗಿ ಪ್ರಮಾಣವಚನ ಸ್ವೀಕರಿಸಿದ ವಿ. ಸುನಿಲ್ ಕುಮಾರ್ ಹಾಗೂ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಆಗಸ್ಟ್ 6ರ ಶುಕ್ರವಾರದಂದು ಅಮೃತ್ ಗಾರ್ಡನ್ನಲ್ಲಿ ಆಯೋಜಿಸಲಾದ ಅಭಿನಂದನಾ ಸಮಾರಂಭ ನಡೆಯಿತು.
ಈ ವೇಳೆ ಸಭೆಯನ್ನುದ್ದೇಶಿಸಿ ಮಾತನಾಡಿದ ಸುನೀಲ್ ಕುಮಾರ್, "ನಾವು ಮುಖ್ಯಮಂತ್ರಿಗಳ ನಿರ್ಧಾರಕ್ಕೆ ಬದ್ದರಾಗಿರುತ್ತೇವೆ. ಸಂಪುಟದಲ್ಲಿ ಯಾವುದೇ ಖಾತೆ ನೀಡಿದರೂ ನಾವು ಸಂಪೂರ್ಣ ಬದ್ಧತೆಯಿಂದ ಕಾರ್ಯ ನಿರ್ವಹಿಸುತ್ತೇವೆ" ಎಂದಿದ್ದಾರೆ.
"ಡಾ. ವಿ.ಎಸ್ ಆಚಾರ್ಯ ಅವರು ನಮಗೆಲ್ಲರಿಗೂ ಮಾರ್ಗದರ್ಶಕರಾಗಿದ್ದಾರೆ. ಅವರು ಪಕ್ಷದ ಎಲ್ಲಾ ಕಾರ್ಯಕರ್ತರಿಗೂ ಸ್ಪೂರ್ತಿಯಾಗಿದ್ದರು. ಈ ಸ್ಥಾನಕ್ಕೆ ಬರಲು ನಾನು ಬಹಳ ಶ್ರಮಪಟ್ಟಿದ್ದೇನೆ. ಕಾರ್ಯಕರ್ತರ ಸಹಕಾರದಿಂದ ನಾನು ಏನಾದರೂ ಸಾಧಿಸಬಹುದು" ಎಂದು ತಿಳಿಸಿದ್ದಾರೆ.
"ಟೀಕೆಗಳ ನಡುವೆ ನಾವು ಎಚ್ಚರಿಕೆಯಿಂದ ಕೆಲಸ ಮಾಡಬೇಕು. ಓರ್ವ ಸಾಮಾನ್ಯ ಪಕ್ಷದ ಕಾರ್ಯಕರ್ತನಿಗೂ ಕೂಡಾ ಸಚಿವ ಸ್ಥಾನ ಸಿಗಬಹುದು. ಇದು ಬಿಜೆಪಿಯಲ್ಲಿ ಮಾತ್ರ ಸಾಧ್ಯ. ಸಾಮಾನ್ಯ ಹಿನ್ನೆಲೆಯಿಂದ ಬಂದ ನನಗೆ ರಾಜ್ಯ ಸರ್ಕಾರ ಸಂಪುಟದಲ್ಲಿ ಅವಕಾಶ ನೀಡಿದೆ" ಎಂದು ಹೇಳಿದ್ದಾರೆ.
"ಉಡುಪಿ ಮತ್ತು ಪಕ್ಷದ ಒಟ್ಟಾರೆ ಬೆಳವಣಿಗೆಗೆ ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ. ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಮತ್ತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ ನಾವು ಉಡುಪಿಯ ಐದು ಶಾಸಕರು ಉತ್ತಮ ಬಾಂಧವ್ಯ ಹೊಂದಿದ್ದೇವೆ. ನಾವು ಉಡುಪಿ ಮತ್ತು ದಕ್ಷಿಣ ಕನ್ನಡದ ಸಮಗ್ರ ಅಭಿವೃದ್ಧಿಗೆ ಕೆಲಸ ಮಾಡುತ್ತೇವೆ" ಎಂದು ತಿಳಿಸಿದ್ದಾರೆ.
ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರು ಮಾತನಾಡಿ, "ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಸಚಿವ ಸಂಪುಟದಲ್ಲಿ ನನಗೆ ಮಂತ್ರಿ ಸ್ಥಾನವನ್ನು ನೀಡಿದ್ದುಮ ನಾನು ಅವರಿಗೆ ತುಂಬಾ ಕೃತಜ್ಞನಾಗಿದ್ದೇನೆ. ಸರ್ಕಾರದ ಯೋಜನೆಗಳು ಮತ್ತು ಕಾರ್ಯಕ್ರಮಗಳು ಸಮಾಜದ ಪ್ರತಿಯೊಬ್ಬ ವ್ಯಕ್ತಿಯನ್ನು ತಲುಪಬೇಕು. ಸರ್ಕಾರವು ಕಾಯ್ದೆಗಳಲ್ಲಿ ಹಲವು ತಿದ್ದುಪಡಿಗಳನ್ನು ತಂದಿದ್ದು ಇದು ಭಾರತದಲ್ಲಿ ಹಲವು ಬದಲಾವಣೆಗಳಾಗಿವೆ. ಈ ಬದಲಾವಣೆಗಳನ್ನು ಎಲ್ಲರೂ ಮೆಚ್ಚಿದ್ದಾರೆ" ಎಂದಿದ್ದಾರೆ.
"ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಕೂಡಲೇ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಪೌರತ್ವ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಿದೆ. ರಾಮ ಮಂದಿರವನ್ನು ನಿರ್ಮಿಸಿದರೆ ಸಂಘರ್ಷಕ್ಕೆ ಕಾರಣವಾಗುತ್ತದೆ ಎಂದು ಅನೇಕ ರಾಜಕೀಯ ಪಕ್ಷಗಳು ಬಿಜೆಪಿಗೆ ಸವಾಲೆಸೆದವು. ಸಿದ್ದರಾಮಯ್ಯ ಕೂಡ ಇದೇ ರೀತಿ ಪ್ರತಿಕ್ರಿಯಿಸಿದ್ದಾರೆ. ಆದರೆ ಈಗ ಅವರು ಸುಪ್ರೀಂ ಕೋರ್ಟ್ ತೀರ್ಪನ್ನು ಮಾತ್ರ ಒಪ್ಪಿಕೊಂಡಿದ್ದಾರೆ. ಈಗ ವಿರೋಧ ಪಕ್ಷದವರು ಬಿಜೆಪಿಯ ಇಚ್ಛಾ ಶಕ್ತಿಯನ್ನು ಅರಿತುಕೊಂಡಿದ್ದಾರೆ" ಎಂದು ತಿಳಿಸಿದ್ದಾರೆ.
"ಸುಮಾರು ಶೇ.83 ಜನರು ಆಯುಷ್ಮಾನ್ ಭಾರತ್ನಿಂದ ಪ್ರಯೋಜನ ಪಡೆದಿದ್ದಾರೆ. ಬಿಜೆಪಿಯ ಅವಧಿಯಲ್ಲಿ ಅನೇಕ ಉತ್ತಮ ಕೆಲಸಗಳು ಆರಂಭವಾಗಿವೆ. ರಾಜ್ಯ ಸರ್ಕಾರವು ಪಾರದರ್ಶಕ, ಭ್ರಷ್ಟಾಚಾರ ರಹಿತ ಮತ್ತು ಜನಸ್ನೇಹಿ ಆಡಳಿತವನ್ನು ನೀಡುತ್ತಿದೆ. ಇದು ನನ್ನಂತಹ ಸಾಮಾನ್ಯ ಪಕ್ಷದ ಕಾರ್ಯಕರ್ತನಿಗೆ ದೊಡ್ಡ ಜವಾಬ್ದಾರಿಯನ್ನು ನೀಡಿದೆ. ನಾನು ದಕ್ಷಿಣ ಕನ್ನಡದ ಜಿಲ್ಲಾ ಉಸ್ತುವಾರಿಯಾಗಿರುವುದರಿಂದ ಮುಂದಿನ ದಿನಗಳಲ್ಲಿ ದ.ಕ ಮತ್ತು ಉಡುಪಿ ಜಿಲ್ಲೆಗಳ ಅಭಿವೃದ್ಧಿಗೆ ನನ್ನ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ" ಎಂದು ಹೇಳಿದ್ದಾರೆ.
ಉಡುಪಿ ಶಾಸಕ ಕೆ ರಘುಪತಿ ಭಟ್, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಲಾಲಾಜಿ ಆರ್ ಮೆಂಡನ್, ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ, ಹಿಂದುಳಿದ ವರ್ಗ ಮೋರ್ಚಾ, ರಾಜ್ಯ ಎಸ್ ಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ದಿನಕರ್ ಬಾಬು, ರಾಜ್ಯ ಎಸ್.ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ್ ಬಾಬು, ಉಡುಪಿ ನಗರ ಸಭೆಯ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಗೀತಾಂಜಲಿ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಉದಯ ಕುಮಾರ್ ಶೆಟ್ಟಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.