ಸುಬ್ರಹ್ಮಣ್ಯ, ಅ 24(SM): ಹಿಂದೂ ಜಾಗರಣ ವೇದಿಕೆ ಸುಳ್ಯ ತಾಲೂಕು ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ್ ಪಂಜ ಅವರ ಮೇಲೆ ಚೈತ್ರಾ ಕುಂದಾಪುರ ಹಾಗೂ ಆಕೆಯ ಬೆಂಬಲಿಗರು ಬುಧವಾರ ರಾತ್ರಿ ನಡೆಸಿದ ಹಲ್ಲೆಯನ್ನು ಖಂಡಿಸಿ ಮತ್ತು ದೇವಸ್ಥಾನಕ್ಕೆ ಧಕ್ಕೆ ತರುವ ರೀತಿಯಲ್ಲಿ ಆಕೆ ನಡೆದಿರುವುದನ್ನು ವಿರೋಧಿಸಿ ಕುಕ್ಕೆ ಸುಬ್ರಹ್ಮಣ್ಯ ನಗರದ ವರ್ತಕರು ನೀಡಿದ್ದ ಬಂದ್ ಕರೆಗೆ ಉತ್ತಮ ಬೆಂಬಲ ವ್ಯಕ್ತವಾಗಿದೆ.
ಬೆಳಗ್ಗಿನಿಂದ ಸಂಜೆಯ ತನಕ ಕುಕ್ಕೆಸುಬ್ರಹ್ಮಣ್ಯದಲ್ಲಿ ಅಂಗಡಿ ಮುಂಗಟ್ಟುಗಳು ಸಂಪೂರ್ಣ ಬಂದ್ ಆಗಿತ್ತು. ಬಂದ್ ಶಾಂತಿಯುತವಾಗಿ ನಡೆಯಿತು. ಕ್ಷೇತ್ರಕ್ಕೆ ಬರುವ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ದೇವಸ್ಥಾನ ವತಿಯಿಂದ ಭಕ್ತರಿಗೆ ಉಪಹಾರ, ಭೋಜನಾ ವ್ಯವಸ್ಥೆ ಮಾಡಲಾಗಿತ್ತು. ಸಂಜೆ ಕುಕ್ಕೆ ದೇವಳದ ರಥಬೀದಿಯಲ್ಲಿ ನಡೆದ ಸಭೆಯಲ್ಲಿ ಊರಿನ ಸಾವಿರಾರು ಜನ ಪಾಲ್ಗೊಂಡಿದ್ದರು. ಬಳಿಕ ಕಾಲ್ನಡಿಗೆಯಲ್ಲಿ ಸುಬ್ರಹ್ಮಣ್ಯ ಪೋಲೀಸ್ ಠಾಣೆಗೆ ತೆರಳಿ ಮನವಿ ಸಲ್ಲಿಸಲಾಯಿತು.
ಚೈತ್ರಾ ಕುಂದಾಪುರ ಹಾಗೂ ಆಕೆಯ ಬೆಂಬಲಿಗರು ನಡೆಸಿದ ಹಲ್ಲೆಯನ್ನು ಖಂಡಿಸಿ ಮತ್ತು ದೇವಸ್ಥಾನಕ್ಕೆ ಧಕ್ಕೆ ತರುವ ರೀತಿಯಲ್ಲಿ ಆಕೆ ನಡೆದಿರುವುದನ್ನು ವಿರೋಧಿಸಿ ಕುಕ್ಕೆ ಸುಬ್ರಹ್ಮಣ್ಯ ನಗರದ ವರ್ತಕರು ಅಂಗಡಿಮುಂಗಟ್ಟುಗಳನ್ನು ಸ್ವಯಂಪ್ರೇರಿತವಾಗಿ ಬಂದ್ ಮಾಡಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ವರ್ತಕರು, ಸಂಘಸಂಸ್ಥೆಯವರು ಹಾಗೂ ಸಾರ್ವಜನಿಕರು, ಭಕ್ತರು ಜಾಥಾದಲ್ಲಿ ಪಾಲ್ಗೊಂಡರು.
ಬೆಳಗ್ಗೆ 10 ಗಂಟೆಯ ಬಳಿಕ ನಗರದ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಿತರಾಗಿ ವರ್ತಕರು ಮುಚ್ಚಿದರು. ಹೊಟೇಲುಗಳು ಕೆಲ ಹೊತ್ತು ತೆರೆದು ಭಕ್ತರಿಗೆ ಅನುಕೂಲ ಮಾಡಿ ಕೊಟ್ಟು ಬಳಿಕ ಮುಚ್ಚಿದವು. ದೇವಸ್ಥಾನದ ಆದಿಶೇಷ ವಸತಿಗೃಹದ ಬಳಿಯಿಂದ ಹೊರಟ ಪ್ರತಿಭಟನಾ ಮೆರವಣಿಗೆ ರಥಬೀದಿ ಮೂಲಕ ಕುಮಾರಧಾರ ತನಕ ಸಾಗಿತು. ಮೆರವಣಿಗೆಯುದ್ದಕ್ಕೂ ಸೇರಿದ ಸಾವಿರಕ್ಕೂ ಅಧಿಕ ಮಂದಿ ಪ್ರತಿಭಟನಕಾರರು ಚೈತ್ರಾ ಕುಂದಾಪುರ ಹಾಗೂ ಆಕೆಯ ಬೆಂಬಲಿಗರ ಗೂಂಡಾ ವರ್ತನೆ ವಿರುದ್ಧ ಕಿಡಿ ಕಾರಿದರು.