ಪುತ್ತೂರು, ಆ 15 (DaijiworldNews/SM): 75ನೇ ಸ್ವಾತಂತ್ರ್ಯ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ಸಲ್ಲಿಸಲು ಸಿದ್ಧತೆ ನಡೆಸಿದ್ದ ಸಂದರ್ಭದಲ್ಲಿ ಹೋರಾಟಗಾರ ಭಾವ ಚಿತ್ರ ಕಿತ್ತು ಅಪಮಾನ ಮಾಡಿರುವ ಕೃತ್ಯ ಖಂಡನೀಯ ಎಂದು ಶಾಸಕ ಸಂಜೀವ ಮಠಂದೂರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಪುತ್ತೂರು ತಾಲೂಕಿನ ಕಬಕದಲ್ಲಿ ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವಸಲ್ಲಿಸುವ ಕಾರ್ಯಕ್ರಮಕ್ಕೆ ಸಿದ್ಧತೆ ನಡೆಸಲಾಗಿತ್ತು. ಆದರೆ, ಸ್ಥಳೀಯ ಸಂಘಟನೆಯೊಂದು ಈ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದೆ. ಅಲ್ಲದೆ, ಹೋರಾಟಗಾರರ ಭಾವಚಿತ್ರಗಳನ್ನು ತೆಗೆದುಹಾಕಿದೆ. ಆ ಮೂಲಕ ದೇಶದ್ರೋಹ ಎಸಗಲಾಗಿದೆ.
ದೇಶದ್ರೋಹದ ವಿಚಾರವನ್ನು ಎಂದಿಗೂ ಸಹಿಸಲು ಸಾಧ್ಯವಿಲ್ಲ. ಯಾರೇ ಆಗಿದ್ದರೂ ಅವರಿಗೆ ಕಠಿಣ ಶಿಕ್ಷೆಯಾಗಬೇಕು. ಕಬಕವನ್ನು ಮತ್ತೊಂದು ಕಾಶ್ಮೀರವಾಗಲು ಬಿಡುವುದಿಲ್ಲ. ಸರಕಾರ ಈ ಬಗ್ಗೆ ಗಮನ ಹರಿಸಲಿದ್ದು, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಲಿದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.