ಉಡುಪಿ, ಅ 27(SM): ಶಿವಮೊಗ್ಗ ಲೋಕಸಭಾ ಉಪಚುನಾವಣೆ ನವೆಂಬರ್ 3 ರಂದು ನಡೆಯಲಿದ್ದು, ಉಡುಪಿ ಜಿಲ್ಲೆಯ ಬೈಂದೂರು ಹಾಗೂ ಕುಂದಾಪುರ ತಾಲೂಕಿನಲ್ಲಿ ಮತದಾನ ನಡೆಯಲಿದೆ. ಚುನಾವಣೆ ಹಿನ್ನೆಲೆ ಮುಂಜಾಗೃತ ಕ್ರಮವಾಗಿ ಮತದಾನಕ್ಕಿಂತ ಮೊದಲು 48 ಗಂಟೆಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಪ್ರೀಯಾಂಕ ಮೇರಿ ಫ್ರಾನ್ಸಿಸ್ ಆದೇಶ ಹೊರಡಿಸಿದ್ದಾರೆ.
ನವೆಂಬರ್ 1ರ ಸಂಜೆ 6 ಗಂಟೆಯಿಂದ ನವೆಂಬರ್ 3ರ ರಾತ್ರಿ 8 ಗಂಟೆಯವರೆಗೆ ಕೆಲವೊಂದು ನಿಬಂಧನೆಗಳನ್ನು ವಿಧಿಸಿ, ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಆದೇಶ ಹೊರಡಿಸಿದ್ದಾರೆ.
ನಿಷೇಧಾಜ್ಞೆ ಜಾರಿ ಮಾಡಿದ ಅವಧಿಯಲ್ಲಿ ಮತದಾನದ ದಿನದಂದು ಮತದಾನ ಕೇಂದ್ರಗಳಿಗೆ ಮತ ಹಾಕಲು ಬರುವ ಮತದಾರರನ್ನು ಹೊರತುಪಡಿಸಿ, ಉಳಿದಂತೆ 5 ಜನರ ಮೇಲ್ಪಟ್ಟು, ಗುಂಪುಗಾರಿಕೆ ಮಾಡುವುದಾಗಲೀ, ಇತರೆ ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸುವಂತಿಲ್ಲ.
ಯಾವುದೇ ಸಂಘಟನೆಗಳು, ರಾಜಕೀಯ ಪಕ್ಷಗಳು, ಧಾರ್ಮಿಕ ಪಂಗಡಗಳು ಮೆರವಣಿಗೆ ಮಾಡಬಾರದು ಹಾಗೂ ಪ್ರತಿಭಟನೆ ನಡೆಸಬಾರದು. ಶಸ್ತ್ರ, ಕಡಗೋಲು, ಖಡ್ಗ, ಚೂರಿ, ಬಂದೂಕು ಅಥವಾ ದೇಹಕ್ಕೆ ಅಪಾಯ ಉಂಟುಮಾಡಬಹುದಾದ ಮಾರಕಾಸ್ತ್ರಗಳನ್ನು ಹಾಗೂ ಯಾವುದೇ ಸ್ಪೋಟಕ ವಸ್ತುಗಳನ್ನು ಸಾಗಿಸುವಂತಿಲ್ಲ.
ಕಲ್ಲು ಅಥವಾ ಎಸೆಯುವ ವಸ್ತುಗಳು, ಎಸೆಯುವ ಅಥವಾ ಚಲಿಸುವ ಅಸ್ತ್ರಗಳನ್ನು ಸಂಗ್ರಹಿಸುವುದನ್ನು ಮತ್ತು ತಯಾರಿಸುವುದನ್ನು ನಿಷೇಧಿಸಿದೆ. ನಿಷೇಧಿಸಿರುವ ಮಾರಕಾಸ್ತ್ರ, ಸ್ಪೋಟಕ ವಸ್ತುಗಳನ್ನು, ಬಂದೂಕುಗಳನ್ನು ಹೊಂದಿದ್ದಲ್ಲಿ ಅವುಗಳನ್ನು ವಶಪಡಿಸಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಅಧಿಕಾರವಿರುತ್ತದೆ ಮತ್ತು ಅಂತಹ ವ್ಯಕ್ತಿಯ ಬಳಿಯಲ್ಲಿರುವ ಮಾರಕಾಸ್ತ್ರಗಳನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಲಿದೆ.
ಚುನಾವಣಾ ಆಯೋಗವು ನೀಡಿರುವ ಸ್ಪಷ್ಟೀಕರಣದಂತೆ ಮತದಾನದ ಹಿಂದಿನ 48 ಗಂಟೆಗಳ ಅವಧಿಯಲ್ಲಿ ಅಭ್ಯರ್ಥಿಯು ಮನೆಮನೆಗೆ ಭೇಟಿ ನೀಡಿ, ಚುನಾವಣಾ ಪ್ರಚಾರ ಮಾಡುವುದಕ್ಕೆ ವಿನಾಯಿತಿ ನೀಡಲಾಗಿದೆ. ಆದರೆ 10ಕ್ಕಿಂತ ಹೆಚ್ಚಿನ ಜನರು ಈ ಗುಂಪಿನಲ್ಲಿ ಇರಬಾರದು. ಈ ಆದೇಶವು ನವೆಂಬರ್ 1ರ ಸಂಜೆ 6ರಿಂದ ನವೆಂಬರ್ 3ರ ಸಂಜೆ 8 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.