ತಿರುವನಂತಪುರ, ಅ 30 (MSP): ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಎಲ್ಲಾ ವಯಸ್ಸಿನ ಮಹಿಳೆಯರ ಪ್ರವೇಶವನ್ನು ನಿರ್ಬಂಧಿಸುವ ಪರವಾಗಿ ಪ್ರತಿಭಟನೆಯಲ್ಲಿ ತೊಡಗಿದ್ದ ಅಯ್ಯಪ್ಪ ಭಕ್ತರಿಗೆ ಬೆಂಬಲವನ್ನು ಸೂಚಿಸಿದ್ದ ಬಿಜೆಪಿ ಅಧ್ಯಕ್ಷ ಅಮಿತ್ ಶಾ, ಮುಂದಿನ ತಿಂಗಳು ಶಬರಿಮಲೆ ಅಯ್ಯಪ್ಪನ ದರ್ಶನ ಪಡೆಯುವ ಇಚ್ಚೆಯನ್ನು ವ್ಯಕ್ತಪಡಿಸಿದ್ದಾರೆ.
ನವೆಂಬರ್ 17 ರಿಂದ ಮತ್ತೆ ಶಬರಿಮಲೆ ದೇಗುಲದಲ್ಲಿ ಮಂಡಲ ಪೂಜೆ ನಡೆಯಲಿದ್ದು ಈ ಸಂದರ್ಭ ಅಮಿತ್ ಶಾ ಅಯ್ಯಪ್ಪಸ್ವಾಮಿ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸುವ ಯೋಜನೆ ಇದೆ ಎಂದು ವರದಿಯಾಗಿದೆ.
ಇದಲ್ಲದೆ , 'ಮುಂದಿನ ತಿಂಗಳು ಶಬರಿಮಲೆ ದೇಗುಲಕ್ಕೆ ಭೇಟಿ ನೀಡಲು ಅಮಿತ್ ಶಾ ನಿರ್ಧರಿಸಿದ್ದಾರೆ. ಆದರೆ ಈ ಬಗ್ಗೆ ಇನ್ನೂ ಅಂತಿಮ ನಿರ್ಧಾರ ತೆಗೆದುಕೊಳ್ಳಬೇಕಿದೆ' ಎಂದು ಕೇರಳದ ಬಿಜೆಪಿ ಹಿರಿಯ ನಾಯಕರು ಹೇಳಿದ್ದಾರೆ. ಇನ್ನೊಂದೆಡೆ ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ ಪಿ.ಎಸ್. ಶ್ರೀಧರನ್ ಪಿಳ್ಳೈ ನ. 8 ರಿಂದ ಶಬರಿಮಲೆಗೆ ರಥಯಾತ್ರೆ ಕೈಗೊಳ್ಳುವುದಾಗಿ ಘೋಷಿಸಿದ್ದಾರೆ. ಎಲ್ಲ ವಯೋಮಾನದ ಮಹಿಳೆಯರ ಭೇಟಿಗೆ ಅವಕಾಶ ನೀಡಿರುವುದನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ ಕಾಸರಗೋಡಿನಿಂದ ಶಬರಿಮಲೆಗೆ ಈ ಯಾತ್ರೆ ನಡೆಸುವುದಾಗಿ ಸ್ಪಷ್ಟಪಡಿಸಿದ್ದಾರೆ.