ಮಂಗಳೂರು, ಸ. 13 (DaijiworldNews/HR): ಸ್ನಾತಕೊತ್ತರ ಮತ್ತು ಪದವಿ ಪರೀಕ್ಷೆಯ ಫಲಿತಾಂಶ ವಿಳಂಬ ಮಾಡಿರುವುದನ್ನು ವಿರೋಧಿಸಿ ಎಬಿವಿಪಿ ಕಾರ್ಯಕರ್ತರು ಕೊಣಾಜೆಯಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯದ ಎದುರು ಪ್ರತಿಭಟನೆ ನಡೆಸಿ ಆಡಳಿತ ಕಚೇರಿಗೆ ಮುತ್ತಿಗೆ ಯತ್ನಿಸಿದ್ದಾರೆ.
ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸಭೆ ಆರಂಭವಾಗುವ ವೇಳೆ ಎಬಿವಿಪಿ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದು, ಈ ವೇಳೆ ಎಬಿವಿಪಿ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದು, ಪೊಲೀಸರ ಹಾಗೂ ಪ್ರತಿಭಟನಾನಿರತರ ನಡುವೆ ತಳ್ಳಾಟ, ನೂಕಾಟ ನಡೆಯಿತು.
ಇನ್ನು ಇದೇ ವೇಳೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಕುಲಪತಿ ಹಾಗೂ ಪರೀಕ್ಷಾಂಗ ಕುಲಸಚಿವರು ಎರಡು ದಿನಗಳಲ್ಲಿ ಫಲಿತಾಂಶ ಪ್ರಕಟಿಸುವ ಬಗ್ಗೆ ಅಧಿಕೃತ ಆದೇಶ ಪ್ರಕಟಿಸುವುದಾಗಿ ಭರವಸೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆಯನ್ನು ಹಿಂದಕ್ಕೆ ತೆಗೆದುಕೊಂಡಿದ್ದಾರೆ.