ಕಾಸರಗೋಡು, ಸೆ. 17 (DaijiworldNews/SM): ಕೊರೋನ, ನಿಫಾ ಹಾಗೂ ಇನ್ನಿತರ ಸವಾಲುಗಳನ್ನು ಮೆಟ್ಟಿ ನಿಲ್ಲುವ ಮೂಲಕ ಆರೋಗ್ಯ ಇಲಾಖೆಗೆ ಹೊಸ ದಿಶೆ ಒದಗಿಸಲಾಗಿದೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅಭಿಪ್ರಾಯಪಟ್ಟರು.
ಅವರು ಆರೋಗ್ಯ ಇಲಾಖೆ ಜಾರಿಗೊಳಿಸಿದ ಹಲವು ಅಭಿವೃದ್ಧಿ ಯೋಜನೆಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿ ಮಾತನಾಡುತ್ತಿದ್ದರು. ರಾಜ್ಯದಲ್ಲಿ ಆರೋಗ್ಯ ಇಲಾಖೆಯಲ್ಲಿ ಬದಲಾವಣೆ ತರಲಾಗಿದೆ. ಸರಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಚಿಕಿತ್ಸೆ, ಸೌಲಭ್ಯ ಕಲ್ಪಿಸಲಾಗುತ್ತಿದೆ. ಕಳೆದ ಮೂರು ವರ್ಷಗಳು ಕೇರಳದಲ್ಲಿ ಆರೋಗ್ಯ ಇಲಾಖೆಗೆ ಸವಾಲಿನ ದಿನಗಳಾಗಿವೆ. ಹಲವು ಸೋಂಕುಗಳು ಕಂಗೆಡಿಸುವಂತೆ ಮಾಡಿದೆ. ಆದರೆ ಎಲ್ಲಾ ರೀತಿಯ ಸವಾಲುಗಳನ್ನು ಮೆಟ್ಟಿ ನಿಲ್ಲುವಂತಾಗಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಮೇಲ್ದರ್ಜೆಗೇರಿಸಿದ ಕುಂಬಳೆ ಪ್ರಾಥಮಿಕ ಆರೋಗ್ಯ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಶಾಸಕ ಎನ್.ಎ. ನೆಲ್ಲಿಕುನ್ನು ಅಧ್ಯಕ್ಷತೆ ವಹಿಸಿದ್ದರು. ಸಂಸದ ರಾಜ್ ಮೋಹನ್ ಉಣ್ಣಿ ತ್ತಾನ್ , ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಬೇಬಿ ಬಾಲಕೃಷ್ಣನ್ , ಕಾರಡ್ಕ ಬ್ಲಾಕ್ ಪಂಚಾಯತ್ ಅಧ್ಯಕ್ಷ ಸಿಜಿ ಮ್ಯಾಥ್ಯೂ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.