ಶಿವಮೊಗ್ಗ, ನ06: 2019ರ ಲೋಕಸಭಾ ಚುನಾವಣೆಯನ್ನು ಗೆಲ್ಲುವುದೊಂದೇ ನಮ್ಮ ಗುರಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಸಮಾರಂಭವೊಂದರಲ್ಲಿ ಮಾತನಾಡಿದ ಅವರು, 2019ರ ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವುದು ನಮ್ಮ ಗುರಿ. ಉಪಚುನಾವಣೆಯಲ್ಲಿ ಸ್ವಲ್ಪ ಮಟ್ಟಿಗೆ ಹಿನ್ನಡೆ ಆಗಿದ್ದರೂ ಚಿಂತೆಯಿಲ್ಲ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅತಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುತ್ತದೆ. ನರೇಂದ್ರ ಮೋದಿ ಅವರನ್ನು ಮತ್ತೆ ಪ್ರಧಾನಿಯನ್ನಾಗಿ ಮಾಡುವುದೇ ನಮ್ಮ ಗುರಿ ಎಂದು ತಿಳಿಸಿದ್ದಾರೆ.
ಮಂಡ್ಯದಲ್ಲಿ ಬಿಜೆಪಿ ಸೋತಿದ್ದರೂ ಪಕ್ಷದ ಸಾಧನೆ ಗಣನೀಯವಾಗಿದೆ. ಬಳ್ಳಾರಿ, ಜಮಖಂಡಿಯಲ್ಲಿ ಬಿಜೆಪಿಗೆ ಹಿನ್ನೆಡೆ ಆಗಿದೆ. ಬಿಜೆಪಿ ಅಭ್ಯರ್ಥಿ ಡಾ. ಸಿದ್ದರಾಮಯ್ಯ 2 ಲಕ್ಷದ 40 ಸಾವಿರ ಮತಗಳನ್ನು ಪಡೆದಿರುವುದು ಸಂತೋಷದ ವಿಚಾರವಾಗಿದೆ. ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಲಾಗುವುದು. ಮಾತ್ರವಲ್ಲ ಲೋಕಸಭಾ ಚುನಾವಣೆಯಲ್ಲಿ ಜಯಗಳಿಸುವುದು ನಮ್ಮ ಗುರಿ ಎಂದು ಯಡಿಯೂರಪ್ಪ ಹೇಳಿದ್ದಾರೆ.