ಬೆಂಗಳೂರು, ನ 09 (MSP): ಇಂದಿನಿಂದ ಮೂರು ದಿನಗಳ ಕಾಲ ಮುಖ್ಯಮಂತ್ರಿಯರ ಕಾರ್ಯಕ್ರಮ ರದ್ದಾಗಿದೆ. ಈ ಮೂರು ದಿನಗಳನ್ನು ಅವರು ತಮ್ಮ ಕುಟುಂಬದೊಂದಿಗೆ ಕಾಲ ಕಳೆಯುವರು ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ. ಹೀಗಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎನ್ನುವುದು ಖಚಿತವಾಗಿದೆ.
ಆದರೆ ವೈದ್ಯರ ಸಲಹೆಯ ಮೇರೆಗೆ ಮುಖ್ಯಮಂತ್ರಿಗಳು ಮೂರು ದಿನಗಳ ವಿಶ್ರಾಂತಿ ಪಡೆದುಕೊಳ್ಳುತ್ತಿದ್ದಾರೆ ಎನ್ನುವ ಮಾಹಿತಿಯ ಹಿಂದೆಯೇ ವಿಶ್ರಾಂತಿ ಪಡೆಯಲು ಟಿಪ್ಪು ಜಯಂತಿ ವಿವಾದವೋ- ಅನಾರೋಗ್ಯದ ನೆಪವೋ ಎನ್ನುವ ಪ್ರಶ್ನೆಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.
ಅಕ್ಟೋಬರ್ ತಿಂಗಳಲ್ಲಿ ಎರೋಟಿಕ್ ವಾಲ್ವ್ ಅಳವಡಿಸಲೆಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ, ಡಿಸ್ಚಾರ್ಜ್ ಆಗಿದ್ದರು. ಇದೀಗ ವೈದ್ಯರು ವಿಶ್ರಾಂತಿ ಪಡೆದುಕೊಳ್ಳಲು ಸೂಚಿಸಿದ್ದಾರೆ ಎಂದು ೩ ದಿನದ ಎಲ್ಲಾ ಕಾರ್ಯಕ್ರಮಗಳು ರದ್ದಾಗಿದ್ದು, ವಿಶ್ರಾಂತಿಗಾಗಿ ಪಶ್ಚಿಮ ಘಟ್ಟ ಅರಣ್ಯ ಪ್ರದೇಶದ ವಿಶ್ರಾಂತಿ ಗೃಹಕ್ಕೆ ತೆರಳಿದ್ದಾರೆ. ಅಲ್ಲಿ ೩ ದಿನಗಳ ಕಾಲ ವಾಸ್ತವ್ಯ ಹೂಡಲಿರುವ ಅವರು ತಮ್ಮ ಪತ್ನಿ ಅನಿತಾ ಹಾಗೂ ಪುತ್ರ ನಿಖಿಲ್ ಜೊತೆ ಕಾಲ ಕಳೆಯಲಿದ್ದಾರ್ಎ. ವಿಶ್ರಾಂತಿ ಪಡೆದ ಬಳಿಕ ಅಂದರೆ ನವೆಂಬರ್ 11 ರ ಸಂಜೆ ರಾಜಧಾನಿಗೆ ವಾಪಸ್ಸಾಗಲಿದ್ದಾರೆ.
ಮೂಲಗಳ ಪ್ರಕಾರ, ಟಿಪ್ಪು ಜಯಂತಿಯಲ್ಲಿ ಪಾಲ್ಗೊಂಡು ವಿವಾದಕ್ಕೆ ಗುರಿಯಾಗುವುದನ್ನು ತಪ್ಪಿಸಲು ಹಾಗೂ ಅದರಲ್ಲಿ ಭಾಗವಹಿಸುದೆ ಇರುವುದು ಒಳಿತು ಎಂದು ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.