ಮಂಗಳೂರು, ಅ.08 (DaijiworlNews/HR): ದಸರಾ ನಿಮಿತ್ತ ನಗರದಲ್ಲಿ ವಿದ್ಯುತ್ ದೀಪಾಲಂಕಾರ ವ್ಯವಸ್ಥೆಯನ್ನು ಪ್ರಥಮ ಬಾರಿಗೆ ಮಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ಮಾಡಿಕೊಡಲಾಗುತ್ತಿದ್ದು, ಮಂಗಳೂರು ನಗರ ದಕ್ಷಿಣ ಶಾಸಕರಾದ ವೇದವ್ಯಾಸ್ ಕಾಮತ್ ಹಾಗೂ ಮೇಯರ್ ಪ್ರೇಮಾನಂದ ಶೆಟ್ಟಿ ಅವರು ಅದರ ಉದ್ಘಾಟನೆಯನ್ನು ನೆರವೇರಿಸಿದರು.
ಬಳಿಕ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್, "ಮೈಸೂರು ದಸರಾ ಹಬ್ಬದಂತೆ ಮಂಗಳೂರು ದಸರಾ ಕೂಡ ಪ್ರಸಿದ್ಧಿ ಪಡೆಯುತಿದ್ದೆ. ಆ ನಿಟ್ಟಿನಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರ ಮಾರ್ಗದರ್ಶನದಲ್ಲಿ,ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ ಅವರ ಸಹಕಾರದೊಂದಿಗೆ ನವರಾತ್ರಿ ಹಬ್ಬದ ಸಂದರ್ಭದಲ್ಲಿ ನಗರದಲ್ಲಿ ವಿದ್ಯುತ್ ದೀಪಾಲಂಕಾರದ ವ್ಯವಸ್ಥೆಯ ಜವಾಬ್ದಾರಿಯನ್ನು ಮಂಗಳೂರು ಮಹಾನಗರ ಪಾಲಿಕೆ ಹೊರಲಿದೆ. ಮಂಗಳೂರು ದಸರಾ ಹಬ್ಬವು ಇನ್ನಷ್ಟು ಮುನ್ನಲೆಗೆ ಬರಬೇಕು" ಎಂದರು.
ಈ ಸಂದರ್ಭದಲ್ಲಿ ಮೇಯರ್ ಪ್ರೇಮಾನಂದ ಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ತೇಜಸ್ವಿನಿ ಗೌಡ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರವಿಶಂಕರ್ ಮಿಜಾರ್, ಪಾಲಿಕೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಸಂದೀಪ್ ಗರೋಡಿ, ಲೀಲಾವತಿ ಪ್ರಕಾಶ್, ಪಾಲಿಕೆ ಸದಸ್ಯರಾದ ಪೂರ್ಣಿಮಾ ಎಂ, ಜಯಶ್ರೀ ಕುಡ್ವ, ಶೈಲೇಶ್ ಶೆಟ್ಟಿ ಅತ್ತಾವರ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ರಾಧಾಕೃಷ್ಣ, ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.