ಬಂಟ್ವಾಳ, ಅ.09 (DaijiworldNews/HR): ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಅಮ್ಟಾಡಿ ಎಂಬಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಐವರ ತಂಡ ಸಾಮೂಹಿಕ ಅತ್ಯಾಚಾರ ಎಸಗಿರುವ ಕೃತ್ಯ ನಡೆದಿದ್ದು, ಈ ಸಂಬಂಧ ಪೊಲೀಸರು ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಶುಕ್ರವಾರ ಬೆಳಿಗ್ಗೆ ಕಾರಿನಲ್ಲಿ ಬಂದ ಪರಿಚಿತ ಆರೋಪಿ ಶಾಲೆಗೆ ತೆರಳುತ್ತಿದ್ದ ಬಾಲಕಿಯನ್ನು ಕಾರಿನಲ್ಲಿ ಹತ್ತಿಸಿಕೊಂಡು ಬಳಿಕ ಅಮ್ಟಾಡಿಯ ನಿರ್ಜನ ಪ್ರದೇಶವೊಂದಕ್ಕೆ ಕರೆದೊಯ್ದು ಜೊತೆಗಿದ್ದವರೊಂದಿಗೆ ಸೇರಿ ಈ ಕೃತ್ಯ ಎಸಗಿದ್ದಾಗಿ ಬಾಲಕಿ ದೂರು ನೀಡಿದ್ದಾಳೆ, ಅಸ್ವಸ್ಥಳಾದ ಬಾಲಕಿ ಸದ್ಯ ಮಂಗಳೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ಬಾಲಕಿಯ ಹೇಳಿಕೆಯ ಆಧಾರದಲ್ಲಿ ಪ್ರಮುಖ ಆರೋಪಿ ಸಹಿತ ನಾಲ್ವರನ್ನು ಬಂಟ್ವಾಳ ನಗರ ಪೊಲೀಸರ ವಿಶೇಷ ತಂಡ ಶನಿವಾರ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಗುರಿಪಡಿಸುತ್ತಿದೆ.
ಆರೋಪಿಗಳು ಬಾಲಕಿಗೆ ಚಾಕಲೇಟ್ ನೀಡಿದ್ದು, ಕೃತ್ಯದ ಬಳಿಕ ಆಕೆಯನ್ನು ಬ್ರಹ್ಮರಕೂಟ್ಲುವಿನ ಟೋಲ್ ಗೇಟ್ ಬಳಿ ಬಿಟ್ಟು ಹೋಗಿರುವುದು ಅಲ್ಲಿನ ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾಗಿದೆ ಎನ್ನಲಾಗಿದೆ.
ಒಟ್ಟು ಐವರು ಆರೋಪಿಗಳು ಈ ಕೃತ್ಯದಲ್ಲಿ ಶಾಮೀಲಾಗಿದ್ದು,ಸದ್ಯ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ಪ್ರಕರಣದ ಕುರಿತು ಹಲವು ಸಂಶಯಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಪೋಕ್ಸೋ ಕಾಯ್ದೆಯಡಿ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು,ತನಿಖೆ ನಡೆಯುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ತಿಳಿಸಿದ್ದಾರೆ.