ಪುತ್ತೂರು, ಅ.26 (DaijiworldNews/HR): ಪುತ್ತೂರಿನ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕನೋರ್ವನನ್ನು ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿದಂತೆ ಪೋಕ್ಸೊ ಕಾಯ್ದೆಯಡಿ ಪುತ್ತೂರು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಪುತ್ತೂರಿನ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ, ಕೊಂಬೆಟ್ಟು ನಿವಾಸಿ ಎಲ್ಯಾಸ್ ಪಿಂಟೋ ಎಂದು ಗುರುತಿಸಲಾಗಿದೆ.
ಮಡಿಕೇರಿ ಮೂಲದ ಅಪ್ರಾಪ್ತ ವಿದ್ಯಾರ್ಥಿನಿಗೆ ವಿದ್ಯಾಸಂಸ್ಥೆಯ ವಸತಿ ನಿಲಯದಲ್ಲಿರುವ ಆರೋಪಿಯು ಲೈಂಗಿಕ ಕಿರುಕುಳ ನೀಡಿದ್ದು, ಆಕೆ ಈ ವಿಚಾರವನ್ನು ತನ್ನ ಪೋಷಕರಿಗೆ ತಿಳಿಸಿದ್ದು, ವಿದ್ಯಾರ್ಥಿನಿಯ ಪೋಷಕರು ಸಂಸ್ಥೆಗೆ ಬಂದು ವಿಚಾರಿಸಿ ಬಳಿಕ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಇನ್ನು ವಿದ್ಯಾರ್ಥಿನಿ ನೀಡಿದ ದೂರಿನಂತೆ ದೈಹಿಕ ಶಿಕ್ಷಣ ನಿರ್ದೇಶಕ ಎಲ್ಯಾಸ್ ಪಿಂಟೋ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದು, ಮಹಿಳಾ ಪೊಲೀಸ್ ಠಾಣೆಯ ಇನ್ ಸ್ಪೆಕ್ಟರ್ ತಿಮ್ಮಪ್ಪ ನಾಯ್ಕ ನೇತೃತ್ವದಲ್ಲಿ ಬಂಧಿಸಲಾಗಿದೆ.