ಮಂಗಳೂರು, ಅ 28 (DaijiworldNews/MS): ದಲಿತ ಸಮುದಾಯದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣವೊಂದರ ಅಪರಾಧಿಗೆ ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಹಾಗೂ ಎಫ್ ಟಿಎಸ್ಸಿ-1 ನ್ಯಾಯಾಲಯದ ನ್ಯಾಯಾಧೀಶೆ ಸಾವಿತ್ರಿ ವಿ. ಭಟ್ ಅವರು 15 ವರ್ಷ ಕಠಿಣ ಸಜೆ ವಿಧಿಸಿ ತೀರ್ಪು ನೀಡಿದ್ದಾರೆ.
ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಪಿ.ಜೆ. ಜೇಕಬ್ ಶಿಕ್ಷೆಗೊಳಗಾದವನು. 2015ರ ಫೆಬ್ರವರಿಯಲ್ಲಿ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ದಲಿತ ಬಾಲಕಿ ಶಾಲೆಯಿಂದ ಮನೆಗೆ ಹೋಗುತ್ತಿದ್ದಳು. ಈ ವೇಳೆ, ಅಪರಾಧಿ ಆಕೆಯನ್ನು ಅಡ್ಡಗಟ್ಟಿ ಮನೆಗೆ ಕರೆದೊಯ್ದು ಅತ್ಯಾಚಾರ ಮಾಡಿದ್ದನು. ಅಲ್ಲದೇ ಈ ವಿಷಯವನ್ನು ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದನು.ಇಷ್ಟಕ್ಕೆ ಸುಮ್ಮನಾಗದ ಆರೋಪಿ ಅನೇಕ ಬಾರಿ ಬಾಲಕಿ ಮೇಲೆ ಕೃತ್ಯ ಎಸಗಿದ ಪರಿಣಾಮ ಬಾಲಕಿ ಮಗುವಿಗೆ ಜನ್ಮ ನೀಡಿದ್ದಳು. ಈ ಸಂಬಂಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು, ಡಿಎನ್ಎ ಪರೀಕ್ಷೆ ನಡೆಸಿದಾಗ ಜೇಕಬನೇ ಮಗುವಿನ ತಂದೆ ಎಂದು ದೃಢಪಟ್ಟಿತ್ತು. ಈ ಬಗ್ಗೆ ಎಎಸ್ಪಿ ರಾಹುಲ್ ಕುಮಾರ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ಅತ್ಯಾಚಾರ ಪ್ರಕರಣಕ್ಕೆ 6 ವರ್ಷ ಕಠಿಣ ಸಜೆ, ಒಂದು ಲ.ರೂ. ದಂಡ, ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ 6 ತಿಂಗಳ ಕಠಿಣ ಸಜೆ, ಬಲವಂತವಾಗಿ ತಡೆದು ನಿಲ್ಲಿಸಿರುವುದಕ್ಕೆ 500 ರೂ. ದಂಡ, ದಂಡ ಪಾವತಿಸಲು ತಪ್ಪಿದರೆ 15 ದಿನ ಸಜೆ, ಕೊಲೆ ಬೆದರಿಕೆ ಹಾಕಿರುವುದಕ್ಕೆ 6 ತಿಂಗಳು ಕಠಿಣ ಸಜೆ, 5,000 ರೂ. ದಂಡ, ದಂಡ ಪಾವತಿಸಲು ತಪ್ಪಿದರೆ ಒಂದು ತಿಂಗಳು ಹೆಚ್ಚುವರಿ ಕಠಿಣ ಸಜೆ, ಪೋಕ್ಸೊ ಕಾಯಿದೆಯಡಿ 15 ವರ್ಷ ಕಠಿಣ ಸಜೆ ಮತ್ತು ಒಂದು ಲ.ರೂ. ದಂಡ, ದಂಡ ಪಾವತಿಸಲು ತಪ್ಪಿದರೆ 1 ವರ್ಷ ಕಠಿಣ ಸಜೆ, ಎಸ್ಸಿ/ಎಸ್ಟಿ ಕಾಯ್ದೆಯಡಿ 2 ವರ್ಷ ಕಠಿಣ ಸಜೆ, 50,000 ರೂ. ದಂಡ, ದಂಡ ಪಾವತಿಸಲು ತಪ್ಪಿದರೆ 3 ತಿಂಗಳು ಹೆಚ್ಚುವರಿ ಸಜೆ ವಿಧಿಸಿ ಬುಧವಾರ ತೀರ್ಪು ನೀಡಿದ್ದಾರೆ.