ಮಂಗಳೂರು, ನ 19(SM): ನಗರದ ಮಠದಕಣಿ 1 ನೇ ಕ್ರಾಸ್ ರಸ್ತೆಯಲ್ಲಿರುವ ಬಾಡಿಗೆ ಮನೆಯೊಂದರಲ್ಲಿ ಯುವತಿಯರನ್ನು ವೇಶ್ಯಾವಾಟಿಕೆಗೆ ಗ್ರಾಹಕರಿಗೆ ಒದಗಿಸುತ್ತಿದ್ದ ದಲ್ಲಾಳಿಯೋರ್ವನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ದೇರೆಬೈಲ್ ನಿವಾಸಿ ಮೇಘರಾಜ್(26) ಬಂಧಿತ ಆರೋಪಿ.
ಮಂಗಳೂರು ನಗರದ ಮಠದಕಣಿ 1 ನೇ ಅಡ್ಡ ರಸ್ತೆಯಲ್ಲಿರುವ ಬಾಡಿಗೆ ಮನೆಯೊಂದರಲ್ಲಿ ಯುವತಿಯರನ್ನು ಬಳಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದಾರೆಂಬ ಬಗ್ಗೆ ಖಚಿತ ಮಾಹಿತಿ ದೊರೆತಿದೆ. ಈ ಹಿನ್ನೆಲೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.
ಇನ್ನು ಬಂಧಿತ ಆರೋಪಿಯಿಂದ 2 ಮೊಬೈಲ್ ಫೋನ್, ಲ್ಯಾಪ್ ಟಾಪ್, ನಗದು ಹಣ, 2 ಬೈಕ್ ಹಾಗೂ ಆಟೋ ರಿಕ್ಷಾವನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯ ಜೊತೆ ಇತರರು ಭಾಗಿಯಾಗಿದ್ದು, ಅವರ ಪತ್ತೆಗೆ ಪೊಲೀಸರು ಶೋಧ ಮುಂದುವರೆಸಿದ್ದಾರೆ.