ಮಂಗಳೂರು, ನ.10 (DaijiworldNews/PY): ಲೋಕಾಯುಕ್ತಕ್ಕೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳಲ್ಲಿ ಬಾಕಿ ಉಳಿದ ಪ್ರಕರಣಗಳನ್ನು ಕೂಡಲೇ ಪರಿಶೀಲಿಸಿ ತನಿಖಾ ವರದಿಯನ್ನು ಸಲ್ಲಿಸುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಅವರು ನ.10ರ ಬುಧವಾರ ಲೋಕಾಯುಕ್ತಕ್ಕೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳಲ್ಲಿ ಬಾಕಿ ಉಳಿದಿರುವ ಪ್ರಕರಣಗಳ ಪ್ರಸ್ತುತ ಹಂತದ ವಿವರಗಳ ಬಗ್ಗೆ ಗೂಗಲ್ ಮೀಟ್ ಮೂಲಕ ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
"ಕರ್ನಾಟಕ ಲೋಕಾಯುಕ್ತರಾದ ಪಿ.ವಿಶ್ವನಾಥ ಶೆಟ್ಟಿ ಅವರು ಇದೇ ನವೆಂಬರ್ 15ರಂದು ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ, ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದು, ಸಂಬಂಧಿಸಿದ ಅಧಿಕಾರಿಗಳು ಸಂಪೂರ್ಣ ಮಾಹಿತಿಯೊಂದಿಗೆ ಕಡ್ಡಾಯವಾಗಿ ಸಭೆಗೆ ಹಾಜರಾಗಬೇಕು" ಎಂದು ಅವರು ಸೂಚಿಸಿದರು.
ಲೋಕಾಯುಕ್ತರು ಅಂಗನವಾಡಿ ಕೇಂದ್ರಗಳು, ಶಾಲೆಗಳು ಹಾಗೂ ಕೊರೊನಾ ಲಸಿಕಾ ಕೇಂದ್ರಗಳಿಗೆ ಭೇಟಿ ನೀಡಿ, ಅಲ್ಲಿನ ಸ್ಥಿತಿಗತಿಗಳನ್ನು ಪರಿಶೀಲಿಸಲಿದ್ದಾರೆ, ಸ್ಥಳದಲ್ಲಿ ಅಧಿಕಾರಿಗಳು ಸೂಕ್ತ ವ್ಯವಸ್ಥೆ ಮಾಡಿಕೊಳ್ಳುವಂತೆ ತಿಳಿಸಿದರು.