ಮಂಗಳೂರು, ನ 20 (DaijiworldNews/MS): ರಾಜ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ ದ.ಕ ಕ್ಷೇತ್ರಕ್ಕೆ ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸುವುದಾಗಿ ಘೋಷಿಸಿದ್ದ ಸಹಕಾರಿ ರಂಗದ ದಿಗ್ಗಜ, ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಮಹತ್ವದ ಬೆಳವಣಿಗೆಯೊಂದರಲ್ಲಿ ಸ್ಪರ್ಧಾಕಣದಿಂದ ಹಿಂದಕ್ಕೆ ಸರಿಯುವುದಾಗಿ ನ.20 ರ ಶನಿವಾರ ಘೋಷಿಸಿದ್ದಾರೆ.
ಸಹಕಾರ ಕ್ಷೇತ್ರದಲ್ಲಿ ಪಕ್ಷಾತೀತನಾಗಿ ಉಳಿಯುವ ಬಯಕೆಯಿಂದ ವಿಧಾನ ಪರಿಷತ್ ಚುನಾವಣೆ ಸ್ಪರ್ಧಾಕಣದಿಂದ ದೂರ ಉಳಿಯುವುದಾಗಿ ಡಾ ಎಂ. ಎನ್. ರಾಜೇಂದ್ರ ಕುಮಾರ್ ದೂರ ಸರಿಯುವುದಾಗಿ ಸ್ಪಷ್ಟಪಡಿಸಿದ್ದಾರೆ.
ವಿಧಾನ ಪರಿಷತ್ ಸ್ಥಾನಕ್ಕೆ ಸ್ಪರ್ಧಿಸುವ ನಿರ್ಧಾರವನ್ನು ಡಾ.ಎಂ.ಎನ್.ರಾಜೇಂದ್ರ ಕುಮಾರ್ ಪ್ರಕಟಿಸಿದ್ದರಿಂದ ಕ್ಷೇತ್ರದಲ್ಲಿ ಹಾಗೂ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿತ್ತು. ದ.ಕ. ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ತಲಾ ಒಂದೊಂದು ಸ್ಥಾನವನ್ನು ಗೆಲ್ಲುವ ಸಾಮರ್ಥ್ಯ ಇದ್ದರೂ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ ಸ್ಪರ್ಧೆ ನಿರ್ಣಾಯಕ ಎನಿಸಿತ್ತು. ಪರಿಷತ್ ಚುನಾವಣೆಯ ಪ್ರಚಾರಕ್ಕಾಗಿ ಅವರು ಇತ್ತೀಚೆಗೆ ಚುನಾವಣಾ ಕಾರ್ಯಾಲಯವನ್ನು ಉದ್ಘಾಟಿಸಿದ್ದರು.