ಮಂಗಳೂರು, ನ. 25 (DaijiworldNews/HR): ಉಳಾಯಿಬೆಟ್ಟು ಪರಾರಿಯ ರಾಜ್ ಟೈಲ್ಸ್ ಹೆಂಚಿನ ಕಾರ್ಖಾನೆಯಲ್ಲಿ ಕೆಲಸ ಮಾಡುವ ಕಾರ್ಮಿಕ ಕುಟುಂಬಕ್ಕೆ ಸೇರಿದ 8 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಕೊಲೆಗೈದು ಚರಂಡಿಗೆಸೆದಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ನಾಲ್ಕನೇ ತರಗತಿಯ ಬಾಲಕಿಯೊಬ್ಬಳು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರಿಗೆ ಗುರುವಾರ ಮನವಿ ಸಲ್ಲಿಸಿದ್ದಾಳೆ.
ಸಾಂದರ್ಭಿಕ ಚಿತ್ರ
ಕುಳಾಯಿಯ ಚಾರ್ವಿ ನಿರಂಜನ್ ಅವರು ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿದ್ದು, ಮನವಿ ಪತ್ರವನ್ನು ಸ್ವೀಕರಿಸಿದ ಆಯುಕ್ತರು ಅಪರಾಧದಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ನವೆಂಬರ್ 24 ರಂದು ಉಳಾಯಿಬೆಟ್ಟು ಪರಾರಿಯ ರಾಜ್ ಟೈಲ್ಸ್ ಹೆಂಚಿನ ಕಾರ್ಖಾನೆಯಲ್ಲಿ ಕೆಲಸ ಮಾಡುವ ಕಾರ್ಮಿಕ ಕುಟುಂಬಕ್ಕೆ ಸೇರಿದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಕೊಲೆಗೈದು ಚರಂಡಿಗೆಸೆದಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಉತ್ತರ ಪ್ರದೇಶದ ಮೂಲದ ನಾಲ್ವರು ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.