ಕಾಸರಗೋಡು, ನ 25(SM): ಕಾಸರಗೋಡು ವೈದ್ಯಕೀಯ ಕಾಲೇಜು ಕಟ್ಟಡ ಕಾಮಗಾರಿ ಎರಡು ವರ್ಷದೊಳಗೆ ಪೂರ್ಣಗೊಳಿಸಲಾಗುವುದು. ಕಾಮಗಾರಿಗೆ ೯೫ ಕೋಟಿ ರೂಪಾಯಿಗಳ ಆಡಳಿತನುಮತಿ ನೀಡಲಾಗಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.
ಅವರು ರವಿವಾರ ಉಕ್ಕಿನಡ್ಕದಲ್ಲಿ ಕಾಸರಗೋಡು ವೈದ್ಯಕೀಯ ಕಾಲೇಜು ಕಟ್ಟಡ ಸಮುಚ್ಛಯಕ್ಕೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಉಕ್ಕಿನಡ್ಕದಲ್ಲಿ ವೈದ್ಯಕೀಯ ಕಾಲೇಜು ಆಸ್ಪತ್ರೆ ಪೂರ್ಣಗೊಳ್ಳುವುದರೊಂದಿಗೆ ಎಂಡೋಸಲ್ಫಾನ್ ಸಂತ್ರಸ್ತರಿಗೆ ಸಹಕಾರಿಯಾಗಲಿದೆ. ಮಂಗಳೂರು ಆಸ್ಪತ್ರೆಯನ್ನು ಆವಲಂಭಿಸುವ ರೋಗಿಗಳಿಗೆ ವೈದ್ಯಕೀಯ ಕಾಲೇಜು ಸಾಕಷ್ಟು ನೆರವಾಗಲಿದೆ ಎಂದು ಹೇಳಿದರು.
ಆರೋಗ್ಯ ವಲಯದಲ್ಲಿ ಸಾಕಷ್ಟು ಬದಲಾವಣೆ ತರುವ ನಿಟ್ಟಿನಲ್ಲಿ ಸರಕಾರ ಗಮನ ಹರಿಸಿದೆ. ಕ್ಯಾನ್ಸರ್, ಕಿಡ್ನಿ, ಕರುಳು ಹಾಗೂ ಇನ್ನಿತರ ಮಾರಕ ರೋಗಗಳಿಗೆ ಉಚಿತ ಚಿಕಿತ್ಸೆ ನೀಡಲು ಸರಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.
ರಾಜ್ಯದ ಎಲ್ಲಾ ಸರಕಾರಿ, ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಸೂಪರ್ ಸ್ಪೆಷಾಲಿಟಿ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ಅವರು ಹೇಳಿದರು. ಆರೋಗ್ಯ ಸಚಿವೆ ಕೆ. ಕೆ. ಶೈಲಜಾ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಎನ್. ಎ ನೆಲ್ಲಿಕುನ್ನು, ಸಂಸದ ಪಿ.ಕರುಣಾಕರನ್, ಜಿಲ್ಲಾ ಪಂಚಾಯತ್ ಅಧ್ಯಕ್ಷ ಎ.ಜಿ.ಸಿ ಬಷೀರ್, ಜಿಲ್ಲಾಧಿಕಾರಿ ಡಾ. ಡಿ. ಸಜಿತ್ ಬಾಬು, ಕಾಸರಗೋಡು ನಗರಸಭಾ ಅಧ್ಯಕ್ಷೆ ಬೀಫಾತಿಮ್ಮ ಇಬ್ರಾಹಿಂ, ಬದಿಯಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷೆ ಕೆ. ಎನ್. ಕೃಷ್ಣ ಭಟ್ ಮೊದಲಾದವರು ಉಪಸ್ಥಿತರಿದ್ದರು.