ಮಂಗಳೂರು, ಡಿ.10 (DaijiworldNews/HR): ತಮಿಳುನಾಡಿನ ಕೂನೂರಿನಲ್ಲಿ ಸೇನಾ ಹೆಲಿಕಾಪ್ಟರ್ ಪತನದಿಂದ ಹುತಾತ್ಮರಾದ ಜನರಲ್ ಬಿಪಿನ್ ರಾವತ್ ಅವರ ಸಾವಿನ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸಂಭ್ರಮಾಚರಿಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಲು ಶಾಸಕ ವೇದವ್ಯಾಸ್ ಕಾಮತ್ ಅವರು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು, ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಎಲ್ಲೆ ಮೀರಿ ವರ್ತಿಸಿದರೆ ಸುಮ್ಮನಿರಲಾಗದು. ಕಳೆದ 43 ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿ ಕಳೆದ ವರ್ಷ ಸೇನಾ ಸಿಬ್ಬಂದಿ ಮುಖ್ಯಸ್ಥರಾಗಿ ಆಯ್ಕೆಯಾದ ವ್ಯಕ್ತಿಯ ಸಾವನ್ನು ಸಂಭ್ರಮಿಸುವ ಸಂಕುಚಿತ ಮನೋಭಾವದ ವ್ಯಕ್ತಿಗಳ ಮೇಲೆ ಕಠಿಣ ಕಾನೂನು ಕ್ರಮ ಜರಗಿಸಲು ಇಲಾಖೆಗೆ ಸೂಚನೆ ನೀಡಿದ್ದೇನೆ. ಈ ವಿಚಾರದಲ್ಲಿ ನಗರ ಪೊಲೀಸ್ ಆಯುಕ್ತರ ಜೊತೆಗೆ ಮಾತುಕತೆ ನಡೆಸಿದ್ದೇನೆ ಎಂದರು.
ಈ ದೇಶದ ಮಣ್ಣಿನಲ್ಲಿ ಹುಟ್ಟಿ ಈ ದೇಶದ ಸೇನಾಧಿಪತಿಯ ಸಾವನ್ನು ಸಂಭ್ರಮಿಸುವ ವಿಕೃತ ಮನಸ್ಸಿನವರು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ದುರ್ಬಳಕೆ ಮಾಡುತಿದ್ದಾರೆ. ಅಂತಹ ವ್ಯಕ್ತಿಗಳ ಮೇಲೆ ಯಾವುದೇ ಮುಲಾಜಿಲ್ಲದೆ ಕಠಿಣ ಕ್ರಮ ಜರಗಿಸಲಾಗುತ್ತದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ.