ಬೆಂಗಳೂರು, ನ 28(SM): ಲೋಕಸಭೆ ಉಪ ಚುನಾವಣೆ ಹಿನ್ನೆಲೆಯಲ್ಲಿ ಮುಂದುಡಲಾಗಿದ್ದ ರಾಜೋತ್ಸವ ಪ್ರಶಸ್ತಿ ಪ್ರಕಟಗೊಂಡಿದೆ. ನ.೨೯ರಂದು ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.
ಸೀತಾರಾಮ್ ಕುಮಾರ್
ಕೃಷ್ಣಕುಮಾರ್ ಪೂಂಜಾ
ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿಗೆ ದ.ಕ. ಜಿಲ್ಲೆಯ ನಾಲ್ವರು ಆಯ್ಕೆಗೊಂಡಿದ್ದಾರೆ. ಯಕ್ಷಗಾನ ರಂಗದ ಚಾರ್ಲಿ ಚಾಪ್ಲಿನ್ ಎಂದೇ ಗುರುತಿಸಿಕೊಂಡಿರುವ ಸೀತಾರಾಮ್ ಕುಮಾರ್ ಕಟೀಲು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅಲ್ಲದೆ ಹಿರಿಯ ನಾಗಸ್ವರ ವಾದಕ ಅಣ್ಣುದೇವಾಡಿಗ ಧರ್ಮಸ್ಥಳ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಡಿ. ಸುರೇಂದ್ರ ಕುಮಾರ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಇನ್ನು ಫರಂಗಿಪೇಟೆಯ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣಕುಮಾರ್ ಪೂಂಜಾ ಅವರು ಈ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಸೇವಾಂಜಲಿ ಪ್ರತಿಷ್ಠಾನದ ಮೂಲಕ ಕಳೆದ ಹಲವಾರು ವರ್ಷಗಳಿಂದ ಅವರು ಸಾಮಾಜಿಕ, ಆರೋಗ್ಯ, ಶೈಕ್ಷಣಿಕ, ಧಾರ್ಮಿಕ, ರಕ್ತದಾನ ಶಿಬಿರ ಮೊದಲಾದ ಸೇವಾ ಕಾರ್ಯಗಳನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದ್ದಾರೆ.
ವಿಜಯಬ್ಯಾಂಕ್ ಉದ್ಯೋಗಿಯಾಗಿದ್ದ ಇವರು 2001ರಿಂದ ಸ್ವಯಂ ನಿವೃತ್ತಿ ಪಡೆದುಕೊಂಡು ಸೇವಾ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಕಳೆದ 20 ವರ್ಷಗಳಿಂದ ಉಚಿತವಾಗಿ ಆರೋಗ್ಯ ತಪಾಸಣಾ ಶಿಬಿರ, 99 ಬಾರಿ ರಕ್ತದಾನ ಶಿಬಿರ, ಕಣ್ಣಿನ ಚಿಕಿತ್ಸಾ ಶಿಬಿರ, ದಂತ ಚಿಕಿತ್ಸಾ ಶಿಬಿರ, ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ, ಜನಶ್ರೀ ವಿಮಾ ಯೋಜನೆಯಡಿ ವಿಮಾ ಸೌಲಭ್ಯಗಳನ್ನು ನೀಡುತ್ತಾ ಬಂದಿದ್ದಾರೆ. ಕಲೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ನಿರಂತರ ಪ್ರೋತ್ಸಾಹವನ್ನು ನೀಡುತ್ತಿದ್ದಾರೆ.
63ನೇ ಕನ್ನಡ ರಾಜ್ಯೋತ್ಸವ ಆಗಿರುವ ಕಾರಣ 63 ಗಣ್ಯರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.