ಮಂಗಳೂರು, ನ 26(SM): ತೋಟ ಬೆಂಗ್ರೆಯಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣವನ್ನು ಖಂಡಿಸಿರುವ ಸಚಿವ ಖಾದರ್, ತ್ವರಿತವಾಗಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ ಪೊಲೀಸರಿಗೆ ನಾಗರಿಕರ ವತಿಯಿಂದ ಒಂದು ಲಕ್ಷ ರೂಪಾಯಿ ಮೊತ್ತವನ್ನು ಬಹುಮಾನವಾಗಿ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಗ್ಯಾಂಗ್ ರೇಪ್ ಪ್ರಕರಣದಲ್ಲಿ ಯಾವುದೇ ದೂರು ಬಾರದಿದ್ದರೂ, ಪ್ರಕರಣದ ಮಾಹಿತಿ ದೊರೆತ ತಕ್ಷಣವೇ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ, ಕ್ಷಿಪ್ರವಾಗಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿರುವುದು ಸರ್ವತ್ರ ಪ್ರಶಂಸನೆಗೆ ಪಾತ್ರವಾಗಿದೆ.
ಇದಕ್ಕಾಗಿ ಪೊಲೀಸರನ್ನು ಅಭಿನಂಧಿಸುವುದಾಗಿ ಸಚಿವರು ತಿಳಿಸಿದ್ದಾರೆ.ಸಂತ್ರಸ್ತ ಯುವತಿಗೆ ರಾಜ್ಯ ಸರಕಾರದಿಂದ ಸೂಕ್ತ ಪರಿಹಾರ ನೀಡಲಾಗುವುದು. ಬೆಂಗ್ರೆ ಪ್ರದೇಶದಲ್ಲಿ ಪೊಲೀಸ್ ಔಟ್ ಪೋಸ್ಟ್ ತೆರೆಯಲು ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಇಂತಹ ಅತ್ಯಾಚಾರ ಪ್ರಕರಣಗಳ ಆರೋಪಿಗಳ ಪರ ಯಾವುದೇ ನ್ಯಾಯವಾದಿಗಳು ವಾದಿಸಲು ಮುಂದೆ ಬಾರದೆ, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಲು ಸಹಕರಿಸಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ.