ಪುತ್ತೂರು, ಡಿ.28 (DaijiworldNews/SM): ಶಾಂತಿ ಮತ್ತು ಸುವ್ಯವಸ್ಥೆ ಇಲ್ಲದಿದಲ್ಲಿ ಸಮಾಜ ನೆಮ್ಮದಿ ಕಾಣಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಸಮರ್ಪಕ ವ್ಯವಸ್ಥೆ ಕಲ್ಪಿಸುವುದು ಆದ್ಯ ಕರ್ತವ್ಯಾಗಿದೆ. ಅದಕ್ಕಾಗಿ ಮೂಲಭೂತ ವ್ಯವಸ್ಥೆಗಳೊಂದಿಗೆ ಹಲವಾರು ಕರ್ತವ್ಯಗಳನ್ನು ಪರಿಪಾಲನೆ ಮಾಡಬೇಕಾಗಿದೆ ಎಂದು ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಎಸ್. ಅಬ್ದುಲ್ ನಝೀರ್ ಹೇಳಿದರು.
ಅವರು ಮಂಗಳವಾರ ಪುತ್ತೂರು ನಗರದ ಆನೆಮಜಲು ಎಂಬಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ನ್ಯಾಯಾಲಯ ಸಂಕೀರ್ಣದ ೨ನೇ ಹಂತದ ಕಟ್ಟಡ ಹಾಗೂ ದರ್ಬೆಯಲ್ಲಿ ನಿರ್ಮಾಣಗೊಳ್ಳಲಿರುವ ನ್ಯಾಯಾಧೀಶರ ವಸತಿ ಗೃಹಕ್ಕೆ ಶಿಲಾನ್ಯಾಸ ನೆರವೇರಿಸಿ, ಆನೆಮಜಲಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಕೀಲರ ಭವನವನ್ನು ಉದ್ಘಾಟಿಸಿ ಮಾತನಾಡಿದರು.
ವ್ಯಾಜ್ಯ ಎಂಬುದು ಕ್ಯಾನ್ಸರ್ ರೋಗದಂತೆ. ವ್ಯಾಜ್ಯವಿರುವಲ್ಲಿ ಶಾಂತಿಯನ್ನು ಕಾಣಲು ಸಾಧ್ಯವಿಲ್ಲ. ಅದನ್ನು ಪರಿಹರಿಸುವ ನಿಟ್ಟಿನಲ್ಲಿ ನ್ಯಾಯಾಲಯದ ವ್ಯವಸ್ಥೆ ಅನಿವಾರ್ಯವಾಗಿದೆ. ರಾಜ್ಯ ಸರ್ಕಾರವು ನ್ಯಾಯಾಲಯಕ್ಕೆ ಸಂಬಂಧಿಸಿದ ಎಲ್ಲಾ ಬೇಡಿಕೆಗಳನ್ನು ಸಕಾಲದಲ್ಲಿ ಈಡೇರಿಸುತ್ತಿದೆ. ಹೆಣ್ಣು ಮಕ್ಕಳು ಇದೀಗ ವಕೀಲರಾಗುವುದು ಹೆಚ್ಚು ಕಂಡು ಬರುತ್ತಿದ್ದು, ಮಹಿಳಾ ವಕೀಲರಿಗಾಗಿ ಪೂರಕ ವ್ಯವಸ್ಥೆಯನ್ನು ರೂಪಿಸಲಾಗುವುದು ಎಂದರು.