ಮಂಗಳೂರು, ಜ. 1 (DaijiworldNews/SM): ಮೊಬೈಲ್ ಮೂಲಕ ಅವಾಚ್ಯ ಶಬ್ದಗಳಿಂದ ನಿಂದನೆ ಸೇರಿದಂತೆ, ಸಂದೇಶಗಳನ್ನು ರವಾನಿಸಿ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಬಂಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ.
ಉಡುಪಿ ಜಿಲ್ಲೆಯ ಹೆಜಮಾಡಿ ಗ್ರಾಮದ ಸಂಶುದ್ದೀನ್(54) ಬಂಧಿತ ಆರೋಪಿಯಾಗಿದ್ದಾನೆ. ಈತ ೨೦೧೯ರಲ್ಲಿ ನಿಂಧನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಬೇಕಾಗಿದ್ದ. ಆದರೆ, ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದರು.
ಹೆಜಮಾಡಿ ಕನ್ನಂಗಾರು ಜುಮ್ಮಾ ಮಸೀದಿಯ ಅಧ್ಯಕ್ಷರಾಗಿದ್ದ ಹೆಚ್.ಬಿ. ಮೊಹಮ್ಮದ್ ಅವರ ಜೊತೆ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಶೀತಲ ಸಮರ ಬಳಿಕ ಮೊಬೈಲ್ ಮೂಲಕ ಆರೋಪಿ ಅಶ್ಲೀಲ ಸಂದೇಶ ರವಾನಿಸಿ ನಿಂದಿಸುತ್ತಿದ್ದ. ಈ ನಡುವೆ ಆರೋಪಿ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ.
ಆರೋಪಿಯ ಬಂಧನಕ್ಕೆ ಪೊಲೀಸರು ವಿವಿಧ ಉಪಾಯಗಳನ್ನು ಹೆಣೆದರೂ ಆರೋಪಿಯನ್ನು ಬಂಧಿಸಲು ಸಾಧ್ಯವಾಗಿರಲಿಲ್ಲ. ಇದೀಗ ಎಲ್.ಒ.ಸಿ. ಸುತ್ತೋಲೆ ಹೊರಡಿಸಿ ಆರೋಪಿಯನ್ನು ಬಂಧಿಸಲಾಗಿದೆ. ಎಲ್ ಒಸಿ ಸುತ್ತೋಲೆ ಹೊರಡಿಸಿದ ಹಿನ್ನೆಲೆಯಲ್ಲಿ ಆರೋಪಿ ವಿದೇಶದಿಂದ ಮಂಗಳೂರಿಗೆ ಆಗಮಿಸಿದ್ದ. ಈ ವೇಳೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಇಮಿಗ್ರೇಷನ್ ಅಧಿಕಾರಿಗಳು ಆರೋಪಿಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಬಳಿಕ ಅವರು ಪೊಲೀಸರಿಗೆ ಮಾಹಿತಿ ರವಾನಿಸಿದ್ದು, ಪೊಲೀಸರು ಆರೋಪಿಯನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.