ಉಡುಪಿ, ಡಿ 08 (DaijiworldNews/MS): ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೈತರು ಬೆಳೆಯುತ್ತಿರುವ, ಸ್ಥಳೀಯ ಕುಚ್ಚಲಕ್ಕಿ ಪ್ರಭೇಧಗಳಾದ ಕಜೆ, ಜಯ, ಜ್ಯೋತಿ, ಪಂಚಮುಖಿ, ಸಹ್ಯಾದ್ರಿ ಹಾಗೂ ಉಮ ತಳಿಗಳನ್ನು ಕೇಂದ್ರ ಸರಕಾರದ ಕನಿಷ್ಠ ಬೆಂಬಲ ಬೆಲೆಯಡಿಯಲ್ಲಿ (MSP) ಖರೀದಿ ಮಾಡಿ ಪಡಿತರದ ಮೂಲಕ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ವಿತರಿಸಲು ಕೇಂದ್ರ ಸರಕಾರ ಅನುಮೋದನೆ ನೀಡಿದೆ.
ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸಾರ್ವಜನಿಕರು ಪಡಿತರದ ಮೂಲಕ ಕುಚ್ಚಲ್ಲಕ್ಕಿಯನ್ನು ವಿತರಿಸುವಂತೆ ಸ್ಥಳೀಯ ಜನಪ್ರತಿನಿಧಿಗಳಲ್ಲಿ ಬೇಡಿಕೆಯನ್ನು ಸಲ್ಲಿಸಿದ್ದರು. ಈ ನಿಟ್ಟಿನಲ್ಲಿ ಉಡುಪಿ- ಚಿಕ್ಕಮಗಳೂರು ಸಂಸದೆ ಹಾಗೂ ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಮತ್ತು ರಾಜ್ಯ ಸಮಾಜ ಕಲ್ಯಾಣ ಇಲಾಖಾ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರ ಪ್ರಯತ್ನದಿಂದ ಕರ್ನಾಟಕ ಸರ್ಕಾರ ಸದರಿ ಬೇಡಿಕೆಯನ್ನು ಅನುಮೋದಿಸುವಂತೆ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿತ್ತು.
ಈ ಕುರಿತು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ, ಶೋಭಾ ಕರಂದ್ಲಾಜೆಯವರು, ಕೇಂದ್ರದ ಸದರಿ ಇಲಾಖಾ ಸಚಿವರಾದ ಪಿಯೂಷ್ ಗೋಯಲ್ ಅವರಿಗೆ ಪತ್ರ ಬರೆದು ಸದರಿ ಪ್ರಸ್ತಾವನೆಯನ್ನು ಅನುಮೋದಿಸುವಂತೆ ಕೋರಿದ್ದರು.
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರ ಮನವಿಯನ್ನು ಪರಿಗಣಿಸಿದ ಪಿಯೂಷ್ ಗೋಯಲ್ ಅವರು ದಿನಾಂಕ. ಜ.6 ರಂದು ಕೇಂದ್ರ ಸಚಿವೆ, ಶೋಭಾ ಕರಂದ್ಲಾಜೆಯವರಿಗೆ ಪತ್ರ ಬರೆದು, ಮೇಲ್ಕಾಣಿಸಿದ ಕುಚ್ಚಲಕ್ಕಿ ಪ್ರಭೇಧಗಳನ್ನು MSP ಮೂಲಕ ಖರೀದಿ ಮಾಡಿ ಪಡಿತರದ ಮೂಲಕ ವಿತರಿಸಲು ರಾಜ್ಯ ಸರಕಾರಕ್ಕೆ ಅನುಮತಿ ನೀಡಿರುವುದಾಗಿ ತಿಳಿಸಿದ್ದಾರೆ.
ಕೇಂದ್ರದ ಈ ಅನುಮತಿಯೊಂದಿಗೆ ಉಡುಪಿ-ದಕ್ಷಿಣ ಕನ್ನಡದ ರೈತರ ಕೃಷಿ ಉತ್ಪಾದನೆಗೆ ಇನ್ನು ಹೆಚ್ಚಿನ ಪ್ರೋತ್ಸಾಹ ಸಿಕ್ಕಿದಂತಾಗಿದೆ. ಅದಲ್ಲದೇ, ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಯ ಸಾರ್ವಜನಿಕರ ಬೇಡಿಕೆಯಾದ ಪಡಿತರದಲ್ಲಿ ಕುಚ್ಚಲಕ್ಕಿ ವಿತರಿಸುವ ಬೇಡಿಕೆಗೆ ಪುಷ್ಟಿ ಸಿಕ್ಕಿದೆ.