ಮಂಗಳೂರು, ಜ 10 (DaijiworldNews/HR): ಅಪರ ಜಿಲ್ಲಾಧಿಕಾರಿ ಮಾಣಿಕ್ಯ ಅವರ ಅದ್ಯಕ್ಷತೆಯಲ್ಲಿ ಜ.10ರ ಸೋಮವಾರ ಗಣರಾಜ್ಯೋತ್ಸವ ಆಚರಣೆ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಿದ್ಧತಾ ಸಭೆ ನಡೆಯಿತು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅಪರ ಜಿಲ್ಲಾಧಿಕಾರಿಗಳು ಜಿಲ್ಲಾ ಮಟ್ಟದಲ್ಲಿ ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮಗಳನ್ನು ಸಂಪ್ರದಾಯದಂತೆ ಎಲ್ಲಾ ನಿಯಮಾವಳಿಗಳನ್ನು ಪಾಲಿಸುವುದರೊಂದಿಗೆ ಅರ್ಥಪೂರ್ಣವಾಗಿ ಆಚರಿಸಲು ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಕ್ರಿಯವಾಗಿ ಭಾಗವಹಿಸಬೇಕು ಎಂದರು.
ಕೋವಿಡ್ -19 ಸೋಂಕಿನ ಮಾರ್ಗಸೂಚಿಗಳ ಪಾಲನೆ ಹಾಗೂ ಸರ್ಕಾರದಿಂದ ಹೊರಡಿಸುವ ಆದೇಶಗಳನ್ನು ಕಡ್ಡಾಯವಾಗಿ ಪಾಲಿಸಲು ಕ್ರಮ ವಹಿಸಬೇಕು, ಮಂಗಳೂರು ಮಹಾನಗರ ಪಾಲಿಕೆ, ಪೊಲೀಸ್, ಶಿಕ್ಷಣ, ಆಹಾರ ಮತ್ತು ನಾಗರೀಕ ಸರಬರಾಜು, ತೋಟಗಾರಿಕೆ, ಡಿಯುಡಿಸಿ, ಡಿಡಿಎಲ್ ಆರ್, ಆರೋಗ್ಯ ಸೇರಿದಂತೆ ಸಂಬಂಧಿಸಿದ ಇಲಾಖೆಗಳು ತಮಗೆ ವಹಿಸಿರುವ ಕಾರ್ಯಗಳನ್ನು ಯಾವುದೇ ಲೋಪವಾಗದಂತೆ ನಿರ್ವಹಿಸಲು ಅವರು ಸೂಚಿಸಿದರು.
ಮುಖ್ಯ ಅತಿಥಿಗಳ ಆಹ್ವಾನ, ವೇದಿಕೆ ಸಿದ್ದತೆ, ದಳಗಳ ವೀಕ್ಷಣೆ, ಗೌರವ ರಕ್ಷೆ ಸೇರಿದಂತೆ ಎಲ್ಲಾ ಕಾರ್ಯಗಳನ್ನು ನಿಯಮಾನುಸಾರ ಕೈಗೊಳ್ಳಬೇಕು. ಸರ್ಕಾರಿ ಕಟ್ಟಡಗಳಿಗೆ ದೀಪಾಲಾಂಕಾರ ಮಾಡಿಸಬೇಕೆಂದು ಅವರು ತಿಳಿಸಿದರು.
ಗಣರಾಜ್ಯೋತ್ಸವದ ಅಂಗವಾಗಿ ನಗರದ ನೆಹರೂ ಮೈದಾನದಲ್ಲಿ ಜ.26ರ ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು, ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಸಂದೇಶ ನೀಡುವರು ಎಂದು ಹೇಳಿದರು.
ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಆನಂದ್ ಕುಮಾರ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿದ್ದರು.