ಉಡುಪಿ, ಜ. 10 (DaijiworldNews/SM): ವಿಶೇಷ ಘಟಕ ಯೋಜನೆಯಡಿ ಪ.ಜಾತಿ ಹಾಗೂ ಪಂಗಡದವರ ಸಮಗ್ರ ಅಭಿವೃದ್ಧಿಗೆ ಮೀಸಲಿಟ್ಟಿರುವ ಅನುದಾನವನ್ನು ಸಂಪೂರ್ಣ ಬಳಕೆ ಮಾಡಿಕೊಳ್ಳುವುದರ ಜೊತೆಗೆ ಪ್ರತಿಶತ 100ರಷ್ಟು ಅನುಷ್ಠಾನಗೊಳಿಸಬೇಕೆಂದು ಅಧಿಕಾರಿಗಳಿಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದರು.
ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಎಸ್.ಸಿ.ಪಿ/ಟಿ.ಎಸ್.ಪಿ ಇಲಾಖಾವಾರು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ.ಜಾತಿ ಮತ್ತು ಪಂಗಡದವರ ಕಲ್ಯಾಣಾಭಿವೃದ್ಧಿಗೆ ಸರ್ಕಾರ ಬಜೆಟ್ನಲ್ಲಿ ಮೀಸಲಿಟ್ಟಿರುವ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುವುದರೊಂದಿಗೆ ಅವರುಗಳಿಗೆ ಮೂಲಭೂತ ಸೌಕರ್ಯಗಳು ಸೇರಿದಂತೆ ವೈಯಕ್ತಿಕ ಸೌಲಭ್ಯಗಳನ್ನು ಕಲ್ಪಿಸುವ ಕಾರ್ಯವಾಗಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸರ್ಕಾರದ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ತಲುಪಿಸಲು ಅನುಕೂಲವಾಗುವ ರೀತಿಯಲ್ಲಿ ಜಿಲ್ಲೆಯ ಪ.ಜಾತಿ, ಪಂಗಡದವರ ನಿಖರ ಮಾಹಿತಿ ಸಂಗ್ರಹಿಸುವುದರೊಂದಿಗೆ ಅವರುಗಳಿಗೆ ಭೂ ಒಡೆತನ, ನಿವೇಶನ, ವಾಸಿಸುವ ಮನೆ, ವಿದ್ಯುಚ್ಛಕ್ತಿ ಸೌಲಭ್ಯ, ಸೇರಿದಂತೆ ಅವರ ಆರ್ಥಿಕ ಮಾಹಿತಿಗಳನ್ನು ಸಂಗ್ರಹಿಸಿದ್ದಲ್ಲಿ ಅವರುಗಳ ಅವಶ್ಯಕತೆಗನುಗುಣವಾಗಿ, ಈ ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸೌಲಭ್ಯಗಳನ್ನು ತಲುಪಿಸಲು ಸಹಕಾರವಾಗುತ್ತದೆ. ಈ ಕಾರ್ಯವನ್ನು ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಇನ್ನೊಂದು ವಾರದೊಳಗೆ ಮಾಹಿತಿ ಸಂಗ್ರಹಿಸಬೇಕೆಂದು ಸೂಚನೆ ನೀಡಿದರು.