ಮಂಗಳೂರು, ಜ 12 (DaijiworldNews/HR): ಕೋವಿಡ್ ಹಾಗೂ ಅದರ ರೂಪಾಂತರಿ ಸೋಂಕಿನ ಚಿಕಿತ್ಸೆಗೆ ಜಿಲ್ಲೆಯ ತಾಲೂಕು ಆಸ್ಪತ್ರೆಗಳು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳನ್ನು ಸನ್ನದ್ದವಾಗಿಟ್ಟುಕೊಳ್ಳುವಂತೆ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಅಂಗಾರ ಅವರು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಕೊರೊನಾ ಸೋಂಕು ಹಾಗೂ ಇತರೆ ವಿಷಯಗಳ ಕುರಿತಂತೆ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಚಿಕಿತ್ಸೆಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಹೆಚ್ಚಿನ ರೋಗಿಗಳು ಬರುವ ಕಾರಣ ಇಲ್ಲಿ ಹೆಚ್ಚಿನ ಒತ್ತಡ ಬೀಳುತ್ತದೆ, ಆದ್ದರಿಂದ ತಾಲೂಕು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು, ಆರೋಗ್ಯ ಕಾರ್ಯಕರ್ತರು, ಬೆಡ್, ವೆಂಟಿಲೇಟರ್ ಗಳು, ಆಕ್ಸಿಜನ್, ಲಿಕ್ವಿಡ್ ಆಕ್ಸಿಜನ್ ಸೇರಿದಂತೆ ಚಿಕಿತ್ಸೆಗೆ ಅಗತ್ಯವಿರುವ ಸಿದ್ದತೆಗಳನ್ನು ಮಾಡಿಕೊಂಡರೆ ಕೋವಿಡ್ ಹಾಗೂ ಅದರ ರೂಪಾಂತರಿ ಹೆಚ್ಚಳವಾದ ಸಂದರ್ಭದಲ್ಲಿ ನೆರವಾಗಲಿದೆ" ಎಂದು ಹೇಳಿದರು.
ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಮಾತನಾಡಿ, "16 ಆಕ್ಸಿಜನ್ ಘಟಕಗಳ ಪೈಕಿ 15 ಕಾರ್ಯನಿರ್ವಹಿಸುತ್ತಿವೆ ಅವುಗಳ ಪರೀಕ್ಷಾರ್ಥ ಪ್ರಯೋಗ ಯಶಸ್ವಿಯಾಗಿದೆ, ಅದೇ ರೀತಿ ಖಾಸಗಿ ಆಸ್ಪತ್ರೆಗಳೂ ಚಿಕಿತ್ಸೆಗೆ ಸಿದ್ಧಗೊಂಡಿವೆ" ಎಂದರು.
ಮಾಸ್ಕ್ ಧರಿಸಲು ವಿರೋಧ ವ್ಯಕ್ತಪಡಿಸುವ ನಾಗರಿಕರಿಗೆ ಅರಿವು ಮೂಡಿಸಬೇಕು, ಸಾರ್ವಜನಿಕರಿಗೆ ತಿಳುವಳಿಕೆ ನೀಡಿ ಲಸಿಕೆ ಪಡೆಯದವರನ್ನು ಗುರುತಿಸಿ ಕೋವಿಡ್ ಲಸಿಕೆ ನೀಡಬೇಕು, ಅದಕ್ಕಾಗಿ ಪರಿಣತರ ತಂಡವನ್ನು ಸಜ್ಜುಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚು ಕಂಡುಬಂದ ಶಾಲೆಗಳನ್ನು ಮಾತ್ರ ತಾತ್ಕಾಲಿಕವಾಗಿ ಮುಚ್ಚಲಾಗುವುದು, ಸದ್ಯ ಶಾಲೆಗಳನ್ನು ಮುಚ್ಚುವ ಸಂದಿಗ್ಧ ಪರಿಸ್ಥಿತಿ ಉದ್ಭವಿಸಿಲ್ಲ, ಲಘು ಪರಿಣಾಮ ಬೀರುವ ಪ್ರಕರಣಗಳ ಅಷ್ಟೇ ಕೆಲವೆಡೆ ವರದಿಯಾಗಿವೆ, ತಾಲೂಕು ಮಟ್ಟದಲ್ಲಿ ತಹಶಿಲ್ದಾರ್ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಆಯಾ ಪ್ರದೇಶದ ವ್ಯಾಪ್ತಿಯ ಶಾಲೆಗಳ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ಕಂಡುಬಂದಲ್ಲಿ ವರದಿ ಮಾಡುವಂತೆ ಜಿಲ್ಲಾಧಿಕಾರಿಯವರು ತಾಕೀತು ಮಾಡಿದರು.
ಬೂಸ್ಟರ್ ಡೋಸ್ ನೀಡಿಕೆಯಲ್ಲಿ ಜಿಲ್ಲೆ ಉತ್ತಮ ಸಾಧನೆ ಮಾಡಬೇಕು, ತಹಶೀಲ್ದಾರರು ಹಾಗೂ ತಾಲ್ಲೂಕು ಆರೋಗ್ಯ ಅಧಿಕಾರಿಗಳು ತಾಲೂಕು ಮಟ್ಟದಲ್ಲಿ ಹೆಚ್ಚಿನ ನೋಂದಣಿಗಳು ಆಗುವಂತೆ ಅಗತ್ಯ ಗಮನಹರಿಸಬೇಕು, ಅರ್ಹರ ಪಟ್ಟಿ ಸಿದ್ದಪಡಿಸಿ, ಅವರುಗಳಿರುವ ಸ್ಥಳಕ್ಕೆ ಹೋಗಿ ಲಸಿಕೆ ನೀಡುವ ಕ್ರಮವಹಿಸಬೇಕು ಎಂದರು.
ಜಿಲ್ಲೆಯಲ್ಲಿ ರಿಕ್ರಿಯೇಶನ್ ಕ್ಲಬ್ ಗಳನ್ನು ಬಂದ್ ಮಾಡಲಾಗುವುದು, ಅಲ್ಲಿ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳು ಸೇರಿದಂತೆ ಎಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ತಿಳಿಸಿದರು.
ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಡಿಸಿ ಮನ್ನಾ ಸ್ಥಳಕ್ಕೆ ಅರ್ಹರಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಫಲಾನುಭವಿಗಳನ್ನು ಗುರುತಿಸಬೇಕು, ಅವರಿಗೆ ಅಗತ್ಯವಿರುವ ಭೂಮಿಯನ್ನು ಮಂಜೂರು ಮಾಡುವ ಕ್ರಮವನ್ನು ಸಂಬಂಧಿಸಿದ ಕಂದಾಯ ಇಲಾಖೆ ಅಧಿಕಾರಿಗಳು ವಹಿಸುವಂತೆ ಸೂಚಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಜಿಲ್ಲಾ ಪಂಚಾಯತ್ ಕಾರ್ಯದರ್ಶಿ ಆನಂದಕುಮಾರ್ ವೇದಿಕೆಯಲ್ಲಿದ್ದರು.
ಶಾಸಕರಾದ ಯು.ಟಿ. ಖಾದರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಕುಮಾರ್ ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಹಾಯಕ ಆಯುಕ್ತರು, ತಹಶೀಲ್ದಾರರು, ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.