ಮಂಗಳೂರು, ಜ 18 (DaijiworldNews/MS): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ಕೋವಿಡ್ ಪಾಸಿಟಿವ್ ಬಂದ ಶಾಲೆಗಳನ್ನು ಒಂದು ವಾರದ ಮಟ್ಟಿಗೆ ತಾತ್ಕಾಲಿಕ ಸ್ಥಗಿತಗೊಳಿಸಿ ಆನ್ಲೈನ್ ತರಗತಿಗಳನ್ನು ಆರಂಭಿಸಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಶಾಲಾ ಆಡಳಿತ ಮಂಡಳಿ ಮತ್ತು ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿಗಳು ಈ ಸೂಚನೆ ನೀಡಿದ್ದಾರೆ.
ಸದ್ಯದ ಸ್ಥಿತಿಯಲ್ಲಿ ಇಡೀ ಜಿಲ್ಲೆಯಲ್ಲಿ ಶಾಲೆಗಳನ್ನು ಸ್ಥಗಿತಗೊಳಿಸುವುದರಿಂದ ತೊಂದರೆಯಾಗಲಿದೆ. ಈ ಕಾರಣದಿಂದ ಯಾವ ಶಾಲೆಗಳಲ್ಲಿ ಪಾಸಿಟಿವ್ ಸಂಖ್ಯೆ ಹೆಚ್ಚು ಕಂಡು ಬಂದಿದೆಯೋ ಆ ಶಾಲೆಗಳನ್ನು ಮಾತ್ರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಬಹುದು ಎಂಬ ಅಭಿಪ್ರಾಯ ಅಧಿಕಾರಿಗಳು, ಆಡಳಿತ ಮಂಡಳಿಯಿಂದ ವ್ಯಕ್ತವಾಯಿತು.
ದಿನನಿತ್ಯ ಶಾಲೆಗಳಿಂದ ಕೋವಿಡ್ ಪಾಸಿಟಿವ್ ಪ್ರಕರಣ ಕುರಿತಂತೆ ಮಾಹಿತಿ ಪಡೆದು, ಅದರಂತೆ ಶಿಕ್ಷಣ ಇಲಾಖೆ ಸೂಕ್ತ ನಿರ್ದೇಶನ ನೀಡಬೇಕು ಹಾಗೂ ಒಂದು ವಾರದ ಬಳಿಕ ಮತ್ತೊಂದು ಸುತ್ತಿನಲ್ಲಿ ಶಾಲಾ ಆಡಳಿತ ಮಂಡಳಿ, ಅಧಿಕಾರಿಗಳ ಸಭೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳುವ ಬಗ್ಗೆ ಜಿಲ್ಲಾಧಿಕಾರಿ ಮಾಹಿತಿ ನೀಡಿದರು.