ಮಂಗಳೂರು, ಫೆ 01(DaijiworldNews/MS): ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಮಂಡಿಸಿದ 2022- 23ನೇ ಸಾಲಿನ ಕೇಂದ್ರ ಬಜೆಟ್ ಅಭಿವೃದ್ಧಿಗೆ ಹೆಚ್ಚಿನ ಉತ್ತೇಜನ ನೀಡುವ ಜನಪರವಾದ ಬಜೆಟ್ ಆಗಿದೆ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್ ಶ್ಲಾಘಿಸಿದ್ದಾರೆ.
ಕೋವಿಡ್ ಸಂಕಷ್ಟದ ನಡುವೆಯೂ ಬಡ ಹಾಗೂ ಮಧ್ಯಮ ವರ್ಗಕ್ಕೆ ಹೆಚ್ಚಿನ ಅನುಕೂಲ ಕಲ್ಪಿಸಿದ್ದು, ಎಲ್ಲ ವರ್ಗದ ಜನರು ಮೆಚ್ಚುವಂತಹಾ ಬಜೆಟ್ ನೀಡಿದ್ದಾರೆ. ಬಡವರ ಬಗ್ಗೆ ವಿಶೇಷ ಕಾಳಜಿಯಿಂದ ಆವಾಸ್ ಯೋಜನೆಯಡಿ 80 ಲಕ್ಷ ಮನೆಗಳ ನಿರ್ಮಾಣ ಘೋಷಿಸಿದ್ದಾರೆ.
ಕೃಷಿಗೆ ವಿಶೇಷ ಆದ್ಯತೆ ನೀಡಲಾಗಿದ್ದು, ಸಾವಯವ ಕೃಷಿಯನ್ನು ಉತ್ತೇಜಿಸಲು ನಿರ್ಧರಿಸಿರುವುದು ಉತ್ತಮ ಬೆಳವಣಿಗೆ. ಅಲ್ಲದೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ರೈತರಿಗೆ ಹೆಚ್ಚಿನ ಸಹಕಾರ ದೊರೆಯಲಿದೆ.
ಚಿನ್ನ, ವಜ್ರಾಭರಣ, ಕೃಷಿ ಉಪಕರಣ, ಮೊಬೈಲ್, ಬಟ್ಟೆ, ಚರ್ಮದ ಉತ್ಪನ್ನಗಳ ಮೇಲಿನ ತೆರಿಗೆ ಇಳಿಕೆ ಮಾಡುವ ಮೂಲಕ ಮಧ್ಯಮ ವರ್ಗದ ಮೇಲಿನ ಹೊರೆಯನ್ನು ತಗ್ಗಿಸಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದ್ದಾರೆ.