ನವದೆಹಲಿ,ಡಿ 12(MSP):ಮಧ್ಯಪ್ರದೇಶದಲ್ಲಿ ಸರ್ಕಾರ ರಚನೆಗೆ ಬಹುಮತದ ಕೊರತೆ ಇರುವ ಕಾಂಗ್ರೆಸ್ ಗೆ ಬೆಂಬಲ ಘೋಷಿಸುವುದಾಗಿ ಬಿಎಸ್ ಪಿ ನಾಯಕಿ ಮಾಯಾವತಿ ಸ್ಪಷ್ಟಪಡಿಸಿದ್ದಾರೆ. ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವುದಾಗಿ ಹೇಳಿಕೊಂಡಿದ್ದಾರೆ.
ಮಧ್ಯಪ್ರದೇಶದಲ್ಲಿ ಸರ್ಕಾರ ರಚಿಸಲು ಕೇವಲ ಎರಡು ಸ್ಥಾನಗಳ ಕೊರೆತೆ ಇತ್ತು. ಹೀಗಾಗಿ ಸರ್ಕಾರ ರಚನೆ ಮಾಡಲು ಪಕ್ಷೇತರ ಅಥವಾ ಇತರ ಪಕ್ಷಗಳ ಸಹಾಯ ಯಾಚಿಸುವುದು ಕಾಂಗ್ರೆಸ್ ಗೆ ಅನಿವಾರ್ಯವಾಗಿತ್ತು. ಕಾಂಗ್ರೆಸ್ ನ ಹಲವು ಸಿದ್ದಾಂತಗಳಿಗೆ ನನ್ನ ಸಹಮತವಿಲ್ಲ, ಆದರೂ ಮಧ್ಯಪ್ರದೇಶದಲ್ಲಿ ಸರ್ಕಾರ ರಚಿಸಲು ನಾವು ಬೆಂಬಲ ನೀಡಲು ಸಿದ್ದರಿದ್ದೇವೆ. ಜಾತಿ ರಾಜಕಾರಣ ಮಾಡುವ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ಈ ನಿರ್ಧಾರ ತೆಗೆದುಕೊಂಡಿದ್ದೇವೆ. ಅವಶ್ಯಕತೆ ಬಿದ್ದರೆ ರಾಜಸ್ತಾನದಲ್ಲೂ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ.
ಮಧ್ಯ ಪ್ರದೇಶದ 230 ವಿಧಾನಸಭೆ ಕ್ಷೇತ್ರಗಳ ಪೈಕಿ ಬಿಎಸ್ ಪಿ ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಐದು ರಾಜ್ಯಗಳ ಚುನಾವಣಾ ಫಲಿತಾಂಶ ಬಿಜೆಪಿ ಗೆ ವಿರುದ್ದವಾಗಿ ಜನ ಮತ ಚಲಾಯಿಸಿದ್ದಾರೆ ಎಂದು ಹೇಳಿರುವ ಮಾಯಾವತಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ವಿರುದ್ಧ ಹೋರಾಟ ಮಾಡುವುದಾಗಿ ಹೇಳಿದ್ದಾರೆ.