ಮಂಗಳೂರು, ಫೆ 19 (DaijiworldNews/MS): ಜಿಲ್ಲಾ ಪಂಚಾಯತ್ ಕಟ್ಟಡದಲ್ಲಿ ನಿರ್ಮಿಸಲಾಗಿರುವ ಶಿಶುಪಾಲನಾ ಕೇಂದ್ರ/ ಮಹಿಳಾ ವಿಶ್ರಾಂತಿ ಕೊಠಡಿ ಹಾಗೂ ಇದೇ ಫೆ.19ರ ಶನಿವಾರದಿಂದ 28ರ ವರೆಗೆ ಹಮ್ಮಿಕೊಳ್ಳಲಾಗಿರುವ ಕಡತ ವಿಲೇವಾರಿ ಅಭಿಯಾನವನ್ನು ಕಂದಾಯ ಸಚಿವರಾದ ಆರ್. ಅಶೋಕ್, ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನೀಲ್ ಕುಮಾರ್, ಜನಪ್ರತಿನಿಧಿಗಳು ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಕಂದಾಯ ಸಚಿವರಾದ ಆರ್. ಅಶೋಕ್, ಕಡತ ವಿಲೇವಾರಿ ಅಭಿಯಾನದ ಮೂಲಕ ಸರ್ಕಾರಿ ಕೆಲಸಕ್ಕೆ ಚುರುಕು ಮುಟ್ಟಿಸಲಾಗುವುದು. ಯಾವುದೇ ಕೆಲಸ ಮಧ್ಯವರ್ತಿಗಳ ಮೂಲಕ ನಡೆಯುವಂತಾಗಬಾರದು. ಸರಕಾರಿ ಸೌಲಭ್ಯ ಪಡೆಯಲು ಫಲಾನುಭವಿಗಳು ಕಚೇರಿಯಿಂದ ಕಚೇರಿಗೆ ಅಲೆದಾಡುವಂತಾಗಬಾರದು ಹೀಗಾಗಿ ಬಡವರಿಗೆ, ಸಮಾಜದಲ್ಲಿ ತುಳಿತಕ್ಕೊಳಗಾದವರಿಗೆ ನ್ಯಾಯ ಒದಗಿಸುವುದು ಕಡತ ವಿಲೇವಾರಿಯ ಮುಖ್ಯ ಗುರಿ ಎಂದರು
ಈ ಸಂದರ್ಭದಲ್ಲಿ ಕಂದಾಯ ಇಲಾಖೆಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಮುಖ್ಯಸ್ಥರು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.