ಬೆಳಗಾವಿ, ಡಿ 19(SM): ರಾಜ್ಯದಲ್ಲಿ ಈಗಾಗಲೇ ಘೋಷಣೆಯಾಗಿರುವ ನೂರು ಬರಪೀಡಿತ ತಾಲೂಕುಗಳಿಗೆ ಹೆಚ್ಚುವರಿಯಾಗಿ 50 ಲಕ್ಷ ರೂ. ಬಿಡುಗಡೆ ಮಾಡಲಾಗುವುದು ಎಂದು ಕಂದಾಯ, ಕೌಶಲಾಭಿವೃದ್ಧಿ ಮತ್ತು ಉದ್ಯಮಶೀಲತೆ ಹಾಗೂ ಜೀವನೋಪಾಯ ಸಚಿವ ಆರ್.ವಿ. ದೇಶಪಾಂಡೆ ತಿಳಿಸಿದ್ದಾರೆ.
ವಿಧಾನ ಸಭೆಯಲ್ಲಿ ಬುಧವಾರ ಬರಗಾಲ ಕುರಿತಂತೆ ನಡೆದ ಚರ್ಚೆಗೆ ಉತ್ತರಿಸಿದ ಅವರು, ಕೇಂದ್ರ ಸರ್ಕಾರದ ಬರ ನಿರ್ವಹಣೆ ಕೈಪಿಡಿ-2016 ರ ಅನ್ವಯ ರಾಜ್ಯದಲ್ಲಿ ಈಗಾಗಲೇ ನೂರು ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ. ಅಲ್ಲದೇ ಡಿಸೆಂಬರ್ 31ರ ನಂತರ ಮತ್ತಷ್ಟು ಬರಪೀಡಿತ ತಾಲೂಕುಗಳನ್ನು ಘೋಷಣೆ ಮಾಡಲಾಗುವುದು ಎಂದು ತಿಳಿಸಿದರು.
ಈಗಾಗಲೇ ಘೋಷಿಸಿರುವ ಬರಪೀಡಿತ ತಾಲೂಕುಗಳಿಗೆ ಬರ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಲು ತಲಾ 50 ಲಕ್ಷ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ. ಆದರೂ ಬರದ ತೀವ್ರತೆ ಗಮನಿಸಿ ಹೆಚ್ಚುವರಿಯಾಗಿ 50 ಲಕ್ಷ ರೂ. ಬಿಡುಗಡೆ ಮಾಡಲಾಗುವುದು ಎಂದಿದ್ದಾರೆ.