ಹಳೆಯಂಗಡಿ, ಮಾ 25 (DaijiworldNews/DB): ಬೈಕ್ ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಶುಕ್ರವಾರ ನಡೆದಿದೆ.
ಮೃತ ಯುವಕನನ್ನು ಮೂಲ್ಕಿ ಚಿತ್ರಾಪು ನಿವಾಸಿ ಗಣೇಶ್ ದೇವಾಡಿಗ (25) ಎಂದು ಗುರುತಿಸಲಾಗಿದೆ.
ಗಣೇಶ್ ಸುರತ್ಕಲ್ ಎನ್ಐಟಿಕೆಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಎಂದಿನಂತೆ ಕೆಲಸಕ್ಕೆಂದು ಬೈಕ್ ನಲ್ಲಿ ತೆರಳುತ್ತಿದ್ದರು. ಆದರೆ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಚರಿಸುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಬೈಕ್ ಡಿವೈಡರ್ ಗೆ ಢಿಕ್ಕಿ ಹೊಡೆದಿತ್ತು. ಢಿಕ್ಕಿಯ ರಭಸಕ್ಕೆ ಆತನಿಗೆ ಗಂಭೀರ ಗಾಯಗಳಾದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆತ ಸಾವನ್ನಪ್ಪಿದ್ದಾನೆ.