ಬೈಂದೂರು, ಏ. 04 (DaijiworldNews/SM): ರೈತರ ಹಿತಾಸಕ್ತಿಗೆ ಪೂರಕವಾಗಿ ಕಾರ್ಯ ನಿರ್ವಹಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್(ಎಸ್ ಸಿಡಿಸಿಸಿ ಬ್ಯಾಂಕ್) ರಾಜ್ಯದಲ್ಲೇ ನಂಬರ್ -1 ಬ್ಯಾಂಕ್ ಆಗಿದ್ದು ಅದರ ಕಾರ್ಯವೈಖರಿ ಇತರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಗಳಿಗೆ ಮಾದರಿಯಾಗಿದೆ ಎಂದು ರಾಜ್ಯ ಸಹಕಾರ ಸಚಿವ ಎಸ್. ಟಿ. ಸೋಮಶೇಖರ್ ಅಭಿಪ್ರಾಯಪಟ್ಟರು.
ಅವರು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 110ನೇ ಉಪ್ಪುಂದ ಶಾಖೆಯನ್ನು ಉದ್ಘಾಟಿಸಿ , ನವೋದಯ ಸ್ವಸಹಾಯ ಸಂಘಗಳ ಸಾಧನಾ ಸಮಾವೇಶದಲ್ಲಿ ಮಾತಾಡುತ್ತಿದ್ದರು.
“ಕೋವಿಡ್ ಸಂದರ್ಭದಲ್ಲಿ ಸಹಕಾರಿ ಬ್ಯಾಂಕ್ ಗಳಿಂದ ಸಾಲ ಪಡೆದಿದ್ದ ಸದಸ್ಯರು ಮರಣ ಹೊಂದಿದ್ದಾರೆ. ಈ ಬಗ್ಗೆ ಅಪೆಕ್ಸ್ ಬ್ಯಾಂಕ್ ನಲ್ಲಿ ಸಭೆ ನಡೆಸಿ ಮೃತರ ಕುಟುಂಬಗಳಿಗೆ ನೆರವಾಗುವ ನಿರ್ಧಾರಕ್ಕೆ ಬರಲಾಯಿತು. ಈ ವೇಳೆ ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ. ಎನ್. ರಾಜೇಂದ್ರ ಕುಮಾರ್ ಅವರು ತಲಾ 1 ಲಕ್ಷ ರೂ. ನೆರವು ಘೋಷಣೆ ಮಾಡಿದ್ದು ಅದರಂತೆ ಇಂದು ಮೃತರ ಕುಟುಂಬಕ್ಕೆ ಚೆಕ್ ಹಸ್ತಾಂತರಿಸಲಾಗಿದೆ. ಎಲ್ಲ ಸಹಕಾರ ಸಂಘಗಳನ್ನು ಒಂದೇ ತಂತ್ರಾಂಶದಡಿಯಲ್ಲಿ ತರಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಈಗಾಗಲೇ ಮನವಿ ಸಲ್ಲಿಸಲಾಗಿದ್ದು ಅವರು ಒಂದು ವರ್ಷದೊಳಗೆ ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುವ ಭರವಸೆ ನೀಡಿದ್ದು, ಇಂದು ರಾಜೇಂದ್ರ ಕುಮಾರ್ ತನ್ನ ಸಂಘಟನಾ ಚಾತುರ್ಯದಿಂದ ತಾನೊಂದು ಶಕ್ತಿ ಎನ್ನುವುದನ್ನು ತೋರಿಸಿಕೊಟ್ಟು ಸಮಾಜಕ್ಕೆ ಒಂದು ಸಂದೇಶವನ್ನು ನೀಡಿದ್ದಾರೆ. ಅವರ ಕಾರ್ಯವೈಖರಿ ಶ್ಲಾಘನೀಯವೆಂದರು. ಕರ್ನಾಟಕದಲ್ಲಿ 15 ಹಾಲಿನ ಯೂನಿಯನ್ ಇದ್ದು 26 ಲಕ್ಷ ರೈತರು ಹಾಲು ಪೂರೈಕೆ ಮಾಡುತ್ತಿದ್ದಾರೆ. ಅದರಲ್ಲಿ 9 ಲಕ್ಷ ಮಹಿಳೆಯರು ಸದಸ್ಯರಾಗಿರುವುದು ಖುಷಿಯ ವಿಚಾರ. ಹೈನುಗಾರಿಕೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸರಕಾರ ಎಲ್ಲರಿಗೂ ಕಾರ್ಡ್ ವಿತರಿಸಲು ಸರಕಾರ ಮುಂದಾಗಿದೆ.” ಎಂದರು.
ನವೋದಯ ಸ್ವಸಹಾಯ ಸಂಘಗಳ ಸಾಧನ ಸಮಾವೇಶ ಉದ್ಘಾಟಿಸಿ ಮಾತಾಡಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು, “ಉತ್ತರ ಕರ್ನಾಟಕ ಭಾಗದ ಹಲವಾರು ಕಾರ್ಖಾನೆಗಳಿಗೆ ಎಸ್ ಸಿಡಿಸಿಸಿ ಬ್ಯಾಂಕ್ ಸಾಲ ಸೌಲಭ್ಯ ನೀಡುತ್ತಾ ಬಂದಿದೆ. ನನ್ನ ನಿರಾಣಿ ಗ್ರೂಪ್ ಗೆ 25 ವರ್ಷಗಳ ಹಿಂದೆ 12 ಕೋಟಿ ರೂ. ಸಾಲವನ್ನು ರಾಜೇಂದ್ರ ಕುಮಾರ್ ಅವರು ನೀಡಿದ್ದು ಅದರಿಂದ ನನ್ನ ಉದ್ದಿಮೆ ಇಂದು ಯಶಸ್ವಿಯಾಗಿ ಬೆಳೆದು ನಿಂತ ಪರಿಣಾಮ ಸಹಸ್ರಾರು ಮಂದಿ ದುಡಿಯಲು ಅವಕಾಶ ಸಿಕ್ಕಿದೆ. ನನ್ನ ಸಂಸ್ಥೆ ಸಕ್ಕರೆ ಉತ್ಪಾದನೆಯಲ್ಲಿ ದೇಶದಲ್ಲೇ ಎರಡನೇ ಸ್ಥಾನ ಪಡೆಯಲು ರಾಜೇಂದ್ರ ಕುಮಾರ್ ಅವರ ಪ್ರೋತ್ಸಾಹವೇ ಕಾರಣ. ಅವರು ಕೇವಲ ಎಸ್ ಸಿಡಿಸಿಸಿ ಬ್ಯಾಂಕಿಗೆ ಮಾತ್ರ ಸೀಮಿತವಾಗಿಲ್ಲ. ರಾಜೇಂದ್ರ ಕುಮಾರ್ ದೇಶದ ಶಕ್ತಿಯಾಗಿ ಬೆಳೆದಿದ್ದಾರೆ ಎಂದರು.
ಹೊಸ ಸ್ವಸಹಾಯ ಸಂಘಗಳ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಕೃಷಿ ಸಚಿವ ಬಿ. ಸಿ. ಪಾಟೀಲ್ ಅವರು, “ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ. ಹೆಣ್ಣುಮಕ್ಕಳು ಸ್ವಾವಲಂಬಿಯಾದರೆ ಆಕೆಯ ಇಡೀ ಕುಟುಂಬದ ಅಭಿವೃದ್ಧಿಯಾಗುತ್ತದೆ. ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರು ನವೋದಯ ಸ್ವಸಹಾಯ ಸಂಘಗಳ ಮೂಲಕ ಮಹಿಳೆಯರಿಗೆ ಸಾಲ ನೀಡಿ ಅವರನ್ನು ಸ್ವಾವಲಂಬಿ ಬದುಕಿಗೆ ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯ ಕಾರ್ಯ. ಸರಕಾರಗಳು ಮಾಡಬೇಕಿರುವ ಕೆಲಸವನ್ನು ಇಂದು ರಾಜೇಂದ್ರ ಕುಮಾರ್ ಮಾಡುತ್ತಾ ಬಂದಿದ್ದಾರೆ. ಇದಕ್ಕಾಗಿ ಅವರನ್ನು ಅಭಿನಂದಿಸುತ್ತೇನೆ. ಅವರ ಸಾಮಾಜಿಕ ಕಳಕಳಿ ಇದೇ ರೀತಿ ಮುಂದುವರಿದು ನಾಡಿನೆಲ್ಲೆಡೆಯ ಜನರು ಪ್ರಯೋಜನ ಪಡೆಯುವಂತಾಗಲಿ” ಎಂದರು.