ಮಂಗಳೂರು, ಏ 07 (DaijiworldNews/HR): ಉಪ್ಪಿನಂಗಡಿ ಬಳಿ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣದಲ್ಲಿ ಬಂಧಿತರಾದವರ ರಕ್ಷಣೆಗೆ ಬರಲಿಲ್ಲವೆಂದು ಪುತ್ತೂರಿನ ಶಾಸಕ ಸಂಜೀವ ಮಠಂದೂರು ಅವರಿಗೆ ಸಂಘಟನೆಯೊಂದರ ಕಾರ್ಯಕರ್ತರು ಮುತ್ತಿಗೆ ಹಾಕಿರುವ ಘಟನೆ ನಡೆದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಪೊಲೀಸರು ಇಬ್ಬರನ್ನು ಬಂಧಿಸಿದ ಬಳಿಕ ಸಂಘಟನೆಯೊಂದರ ಕಾರ್ಯಕರ್ತರು ಪುತ್ತೂರು ಶಾಸಕ ಸಂಜೀವ ಮಠಂದೂರ ಅವರು ಬೆಂಗಳೂರಿಗೆ ಹೋಗಲು ಉಪ್ಪಿನಂಗಡಿಯಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ಅವರನ್ನು ಸುಮಾರು 50 ಮಂದಿ ಅಡ್ಡಗಟ್ಟಿ ಮುತ್ತಿಗೆ ಹಾಕಿದ್ದಾರೆ.
ಇನ್ನು ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಈ ಘಟನೆಯಾಗಿದ್ದು, ತಮ್ಮ ಕ್ಷೇತ್ರದಲ್ಲಿ ಅಲ್ಲ ಎಂದು ಶಾಸಕರು ಹೇಳುತ್ತಿದ್ದಂತೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದ್ದು, ಬಳಿಕ ಶಾಸಕರು ಘಟನೆ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇನೆ ಎಂದು ಹೇಳಿದ ನಂತರ ಪ್ರತಿಭಟನಾಕಾರರು ಅಲ್ಲಿಂದ ಹೊರಟುಹೋಗಿದ್ದಾರೆ ಎಂದು ತಿಳಿದು ಬಂದಿದೆ.