ಉಡುಪಿ, ಏ 11 (DaijiworldNews/SM): ರಾಜ್ಯದಲ್ಲಿ ಸರ್ಕಾರ ಯಾವುದೇ ಕಾರಣಕ್ಕೂ ಹಿಂಸಾಚಾರ ಸಹಿಸುವುದಿಲ್ಲ. ಧರ್ಮಕ್ಕೆ ಸಂಬಂಧಿಸಿದ ವಿಷಯಗಳ ಹೆಸರಲ್ಲಿ ಕಾನೂನು ಕೈಗೆತ್ತಿಕೊಂಡಲ್ಲಿ ಅವರ ವಿರುದ್ಧ ಕ್ರಮಕೈಗೊಳ್ಳಲಾಗುವುದೆಂದು ಸಿಎಂ ಬಸವರಾಜ್ ಬೊಮ್ಮಾಯಿ ಎಚ್ಚರಿಸಿದ್ದಾರೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸರಕಾರ ಬದ್ಧವಾಗಿದೆ. ಕಾನೂನಿನ ಮುಂದೆ ಎಲ್ಲರೂ ಸಮಾನರಾಗಿದ್ದಾರೆ ಎಂದು ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಪ್ರಸ್ತುತ ರಾಜ್ಯದಲ್ಲಿರುವ ಬಿಜೆಪಿ ನೇತೃತ್ವದ ಸರಕಾರ ಉತ್ತಮ ಆಡಳಿತ ನೀಡುತ್ತಿದೆ. ಅಲ್ಲದೆ, ರಾಜ್ಯದ ಜನತೆಗೆ ಉತ್ತಮ ಯೋಜನೆಗಳನ್ನು ನೀಡುತ್ತಿದೆ ಎಂದರು.
ರಾಜ್ಯದಲ್ಲಿ ಈ ಹಿಂದಿನ ಕಾಂಗ್ರೆಸ್ ಸರ್ಕಾರ ಕೊಲೆಯಲ್ಲಿ ನೇರವಾಗಿ ಭಾಗಿಯಾಗಿರುವ ಕೆಲವು ಸಂಸ್ಥೆಗಳೊಂದಿಗೆ ಸಂಬಂಧ ಹೊಂದಿರುವ ವ್ಯಕ್ತಿಗಳನ್ನು ಆರೋಪ ಮುಕ್ತಗೊಳಿಸಲು ಅವಕಾಶ ಮಾಡಿಕೊಟ್ಟಿದೆ. ಆಗ ಆಡಳಿತ ಪ್ರಜ್ಞೆ ಎಲ್ಲಿತ್ತು? ಎಂದು ಸಿಎಂ ಪ್ರಶ್ನಿಸಿದರು.
ಉಡುಪಿಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಿಸಲು ಸಾರ್ವಜನಿಕ, ಖಾಸಗಿ ಸಹಭಾಗಿತ್ವ ಆಯ್ಕೆಗೆ ಸಾಧಕಬಾಧಕಗಳ ಬಗ್ಗೆ ಚರ್ಚೆ ನಡೆಸಲಾಗುವುದೆಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.