ಮಂಗಳೂರು, ಏ 12 (DaijiworldNews/DB): ಪತ್ರಕರ್ತರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ನಿಯೋಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.
ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅವರ ನೇತೃತ್ವದಲ್ಲಿ ಪದಾಧಿಕಾರಿಗಳ ನಿಯೋಗವು ಪತ್ರಕರ್ತರಿಗೆ ನಿವೇಶನ, ನಿವೃತ್ತ ಪತ್ರಕರ್ತರಿಗೆ ಪಿಂಚಣಿ, ಆರೋಗ್ಯ ಸೇವೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಮುಖ್ಯಮಂತ್ರಿ ಅವರಿಗೆ ಒತ್ತಾಯಿಸಿತು.
ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೇಡಿಕೆಗೆ ಸ್ಪಂದಿಸುವುದಾಗಿ ಭರವಸೆ ನೀಡಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವ ಶ್ರೀನಿವಾಸ್ ನಾಯಕ್ ಇಂದಾಜೆ ಅವರನ್ನು ಈ ವೇಳೆ ಮುಖ್ಯಮಂತ್ರಿಯವರು ಸನ್ಮಾನಿಸಿದರು.
ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ್ ಕಾಮತ್, ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟಾ, ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್., ಕಾರ್ಯಕಾರಿ ಸಮಿತಿ ಸದಸ್ಯ ಸುಖಪಾಲ್ ಪೊಳಲಿ ಉಪಸ್ಥಿತರಿದ್ದರು.