ಮಂಗಳೂರು, 14 (DaijiworldNews/MS): ರಾಜ್ಯಾದ್ಯಂತ ಏಪ್ರಿಲ್ 22ರಿಂದ ಮೇ 18ರ ವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಗಳು ಜಿಲ್ಲೆಯಲ್ಲಿ ಸುಸೂತ್ರವಾಗಿ ನಡೆಯಲು ಎಲ್ಲಾ ರೀತಿಯ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸಂಬಂಧಿಸಿದ ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಏ.13ರ ಬುಧವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿಯಿಂದ ವಿಡಿಯೋ ಕಾನ್ಪರೆನ್ಸ್ ಮೂಲಕ ಹಮ್ಮಿಕೊಂಡಿದ್ದ ಸಭೆಯಲ್ಲಿ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನ ನೀಡಿದರು.
ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಜ್ ಮಾಡಲು ತಿಳಿಸಲಾಗಿದ್ದು, ಪರೀಕ್ಷಾ ಸಿದ್ದತೆಗಳು ಹಾಗೂ ವಹಿಸಬೇಕಾದ ಕ್ರಮಗಳ ಕುರಿತು ಈಗಾಗಲೇ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರೊಂದಿಗೆ ಮಾತನಾಡಿ ಅಗತ್ಯ ಸಲಹೆ ಹಾಗೂ ಸೂಚನೆಗಳನ್ನು ನೀಡಲಾಗಿದೆ, ಪರೀಕ್ಷಾ ಕೇಂದ್ರಗಳ ಸುತ್ತ ಸೆಕ್ಷನ್ 144 ಪ್ರಕಾರ ನಿಷೇಧಾಜ್ಞೆ ಜಾರಿ ಮಾಡಲಾಗುವುದು ಎಂದು ತಿಳಿಸಿದ ಜಿಲ್ಲಾಧಿಕಾರಿಯವರು, ತಾಲೂಕುಗಳ ತಹಶೀಲ್ದಾರರು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರೊಂದಿಗೆ ಚರ್ಚಿಸಬೇಕು, ಪರೀಕ್ಷಾ ಕೇಂದ್ರಗಳಿಗೆ ಸ್ಥಳೀಯ ಪೊಲೀಸರಿಂದ ಬಂದೋಬಸ್ತ್ ಒದಗಿಸುವಂತೆ ಅವರು ತಿಳಿಸಿದರು.
ವಿದ್ಯಾರ್ಥಿಗಳು ಮುಕ್ತ ಹಾಗೂ ಪಾರದರ್ಶಕವಾಗಿ ಯಾವುದೇ ಗೊಂದಲಕ್ಕೊಳಗಾಗದಂತೆ ಪರೀಕ್ಷೆ ಬರೆಯಬೇಕು, ಆ ಮೂಲಕ ಪರೀಕ್ಷೆಯನ್ನು ಯಶಸ್ವಿಗೊಳಿಸುವಂತೆ ಅವರು ಹೇಳಿದರು.
12 ಸರ್ಕಾರಿ, 23 ಅನುದಾನಿತ ಹಾಗೂ 16 ಅನುದಾನ ರಹಿತ ಕಾಲೇಜುಗಳು ಸೇರಿದಂತೆ ಒಟ್ಟು ಜಿಲ್ಲೆಯಲ್ಲಿ 51 ಪರೀಕ್ಷಾ ಕೇಂದ್ರಗಳನ್ನು ರಚಿಸಲಾಗಿದೆ, ಅವುಗಳಿಗೆ 14 ಮಂದಿ ರೂಟ್ ಆಫೀಸರ್ಸ್ಗಳ ನೇಮಕ ಮಾಡಲಾಗಿದ್ದು, ಒಟ್ಟಾರೆ 31,308 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. ಅವರಲ್ಲಿ 15,652 ಬಾಲಕರು ಹಾಗೂ 15,656 ಬಾಲಕಿಯರಾಗಿದ್ದಾರೆ, ಕಲಾ ವಿಭಾಗದಲ್ಲಿ 4,329, ವಾಣಿಜ್ಯ ವಿಭಾಗದಲ್ಲಿ 14,987 ಹಾಗೂ ವಿಜ್ಞಾನ ವಿಭಾಗದಲ್ಲಿ 11,992 ವಿದ್ಯಾರ್ಥಿಗಳಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಜಯಣ್ಣ ಮಾಹಿತಿ ನೀಡಿದರು.
ವಿವಿಧ ಇಲಾಖೆಗಳ ಅಧಿಕಾರಿಗಳು, ತಹಶೀಲ್ದಾರರು, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಆನ್ಲೈನ್ ಸಭೆಯಲಿದ್ದರು.