ಮಂಗಳೂರು, ಏ 25 (DaijiworldNews/DB): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ವಸತಿ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರಾದ ವಿ.ಸೋಮಣ್ಣ ಅವರು ಏಪ್ರಿಲ್ 27ರ ಬುಧವಾರ ದ.ಕ. ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಏಪ್ರಿಲ್ 27ರ ಬುಧವಾರ ಬೆಳಗ್ಗೆ 10.20ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು 11.30ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಮಧ್ಯಾಹ್ನ 12 ಗಂಟೆಗೆ ಮೂಡಬಿದಿರೆಗೆ ಆಗಮಿಸಿ, ಅಲ್ಲಿನ ಎಕ್ಸಲೆಂಟ್ ಪಪೂ ಕಾಲೇಜಿನ ನೂತನ ಅನ್ನದಾಸೋಹ ಕಟ್ಟಡವನ್ನು ಉದ್ಘಾಟಿಸುವರು. 12.30ಕ್ಕೆ ಜೈನ ಬಸದಿಗೆ ಬೇಟಿ ನೀಡುವರು. 1 ಗಂಟೆಗೆ ಮೂಡಬಿದಿರೆ ಪ್ರೆಸ್ಕ್ಲಬ್ ಆವರಣದಲ್ಲಿ ನೂತನ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸುವರು. 3 ಗಂಟೆಯಿಂದ ಸಂಜೆ 5ರವರೆಗೆ ಮೂಡಬಿದಿರೆಯ ಆಡಳಿತ ಸೌಧದ ಮುಂಭಾಗದಲ್ಲಿ ಮುಲ್ಕಿ- ಮೂಡಬಿದಿರೆ ವಿಧಾನ ಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಹಾಗೂ ಸಾರ್ವಜನಿಕ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
5.30ಕ್ಕೆ ಮೂಡಬಿದಿರೆಯಿಂದ ರಸ್ತೆ ಮಾರ್ಗವಾಗಿ ನಿರ್ಗಮಿಸಿ, 6 ಗಂಟೆಗೆ ಬಜಪೆಯಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ, 6.50ಕ್ಕೆ ವಿಮಾನದ ಮೂಲಕ ಹೊರಟು, ರಾತ್ರಿ 7.45ಕ್ಕೆ ಬೆಂಗಳೂರು ತಲುಪಲಿದ್ದಾರೆ ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಸತಿ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ವಿ.ಸೋಮಣ್ಣ ಅವರು ಏಪ್ರಿಲ್ 27ರ ಬುಧವಾರ ಬೆಳಗ್ಗೆ 10 ಗಂಟೆಗೆ ಬೆಂಗಳೂರಿನಿಂದ ಹೊರಟು 11.20ಕ್ಕೆ ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಮಧ್ಯಾಹ್ನ 12 ಗಂಟೆಗೆ ಮೂಡಬಿದರೆಗೆ ಆಗಮಿಸಿ ಪಕ್ಷದ ಕಚೇರಿಗೆ ಭೇಟಿ ನೀಡುವರು.
3 ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಮುಲ್ಕಿ-ಮೂಡಬಿದಿರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಮೂಡಬಿದಿರೆ ತಾಲೂಕು ಆಡಳಿತ ಸೌಧದ ಉದ್ಘಾಟನೆ ಹಾಗೂ ಕ್ಷೇತ್ರದ ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ 5.30ಕ್ಕೆ ಮೂಡಬಿದಿರೆಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ 6.50ಕ್ಕೆ ವಿಮಾನದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.